ನವದೆಹಲಿ: ಜೂನ್ 18ರಂದು ನಡೆದಿದ್ದ ಯುಜಿಸಿ ನೆಟ್ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್ (UGC-NET) ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಯುಜಿಸಿ ನೆಟ್ ಪರೀಕ್ಷೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.
ಜೂನ್ 18ರ ಮಂಗಳವಾರದಂದು UGC-NET ಪರೀಕ್ಷೆಯನ್ನು ದೇಶದಾದ್ಯಂತ 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆದ್ರೆ,ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಲು ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸುವ ತೀರ್ಮಾನ ಕೈಗೊಂಡಿದೆ.
ನ್ಯಾಷನ್ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಆಫ್ ಇಂಡಿಯನ್ ಸೈಬರ್ ಕ್ರೈಮ್ ಕೋ-ಆರ್ಡಿನೇಷನ್ ಸೆಂಟರ್ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಹೊಸದಾಗಿ ಪರೀಕ್ಷೆ ನಡೆಸುವುದಾಗಿ ಕೇಂದ್ರ ಶಿಕ್ಷಣ ಇಲಾಖೆ ತಿಳಿಸಿದೆ. ಅದರ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಮಾಹಿತಿ ನಿಡಿದೆ. ಅಲ್ಲದೆ ಪ್ರಕರಣವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದೆ.
ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET 2024) ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂಬ ಆಗ್ರಹಗಳು ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ, ಜೂನ್ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲೂ (NET 2024) ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿದೆ.