ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ನಡೆದಿದೆ.
ಮೃತ ಮಹಿಳೆಯನ್ನು ಕುಮಾರಮಂಗಲ ಮೂಲದ ಸಾವಿತ್ರಿ (42) ಎಂದು ಗುರುತಿಸಲಾಗಿದೆ. ಆರೋಪಿ ಪತಿಯನ್ನು ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂದು ಗುರುತಿಸಲಾಗಿದೆ.
ದಂಪತಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಪುರುಷೋತ್ತಮ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಕೃತ್ಯದ ಬೆನ್ನಲ್ಲೇ ಆತ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಘಟನೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.























