ಹಿಂಬದಿಯಿಂದ ಬಂದ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾರ್ಕಳದ ಪಳ್ಳಿ ಅಡಪಾಡಿ ಬಳಿ ಗುರುವಾರ ನಡೆದಿದೆ.
ಮೃತರನ್ನು ಹಿರಿಯಡ್ಕ ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ.
ಗಣೇಶ್ ನಾಯಕ್ ಅವರು ತಮ್ಮ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಬೈಕ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಣೇಶ್ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ.
ಗಣೇಶ್ ಅವರು ಹೆಲ್ಮೆಟ್ ಧರಿಸಿದ್ದರೂ ಸಹ, ಟಿಪ್ಪರ್ ಲಾರಿಯ ಹಿಂಬದಿಯ ಚಕ್ರ ಅವರ ತಲೆಯ ಮೇಲೆ ಹರಿದಿದ್ದರಿಂದ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.























