ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ಉಂಟಾಗಿದೆ ಎಂದು ಆರೋಪಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಸ್ಯೆಯನ್ನು ತಕ್ಷಣ ಸರಿಪಡಿಸದಿದ್ದರೆ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ.
ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ಲಾಸ್ಟಿಕ್ ಕಸ, ಸ್ಯಾನಿಟರಿ ಪ್ಯಾಡ್‌ಗಳು, ಪ್ಯಾಂಪರ್ಸ್ ಸೇರಿದಂತೆ ಹಸಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬದಲು ಘಟಕದ ಹಿಂಭಾಗದಲ್ಲಿ ಗುಂಡಿ ತೋಡಿ ಮಣ್ಣಿನಲ್ಲಿ ಮುಚ್ಚಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಗ್ರಾಮ ಪಂಚಾಯಿತಿ ವತಿಯಿಂದ ಮನೆ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸಿ, ವಿಂಗಡಿಸಿ ಎಂಆರ್‌ಎಫ್ ಘಟಕದ ಮೂಲಕ ವಿಲೇವಾರಿ ಮಾಡುವ ವ್ಯವಸ್ಥೆ ಜಾರಿಯಲ್ಲಿದೆ. ಇದಕ್ಕಾಗಿ ಸಾರ್ವಜನಿಕರಿಂದ ತ್ಯಾಜ್ಯ ನಿರ್ವಹಣಾ ಶುಲ್ಕವನ್ನೂ ಸಂಗ್ರಹಿಸಲಾಗುತ್ತಿದೆ. ಆದರೆ ಘಟಕದಲ್ಲಿ ತ್ಯಾಜ್ಯದ ರಾಶಿ ಹೆಚ್ಚಾಗುತ್ತಿದ್ದರೂ ಸೂಕ್ತ ವಿಲೇವಾರಿ ವ್ಯವಸ್ಥೆ ಮಾಡದೆ ತ್ಯಾಜ್ಯವನ್ನು ಭೂಮಿಯಲ್ಲಿ ಹೂತು ಹಾಕಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಘಟಕಕ್ಕೆ ಮಾಂಸ ಹಾಗೂ ವಿವಿಧ ಆಹಾರ ತ್ಯಾಜ್ಯಗಳು ಬರುತ್ತಿದ್ದು, ಅವುಗಳನ್ನು ಸಮರ್ಪಕವಾಗಿ ನಿರ್ವಹಿಸದ ಪರಿಣಾಮ ಸುತ್ತಮುತ್ತ ದುರ್ವಾಸನೆ ಬೀರುತ್ತಿದೆ. ತ್ಯಾಜ್ಯದ ರಾಶಿಯಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಶಾಲೆಗೆ ತೆರಳುವ ಮಕ್ಕಳು ಸೇರಿದಂತೆ ಸ್ಥಳೀಯರು ಆತಂಕದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಲಾಗಿದೆ.
ಸುಮಾರು ಮೂರು–ನಾಲ್ಕು ವರ್ಷಗಳ ಹಿಂದೆ ಘಟಕ ಆರಂಭಗೊಂಡಾಗ ಒಣ ತ್ಯಾಜ್ಯ ಸಂಗ್ರಹಿಸಿ ವಿಂಗಡಿಸುವ ವ್ಯವಸ್ಥೆ ಇತ್ತು. ಬಳಿಕ ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿಸುವ ಘಟಕವನ್ನೂ ಆರಂಭಿಸಲಾಗಿತ್ತು. ಮನೆಗಳಿಂದ ಸಂಗ್ರಹಿಸಿದ ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಯೋಜನೆಯೂ ರೂಪಿಸಲಾಗಿತ್ತು. ಆದರೆ ಕಳೆದ ಕೆಲವು ಸಮಯದಿಂದ ಈ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸುಮಾರು ಎರಡು ವರ್ಷಗಳಿಂದ ಸಂಗ್ರಹವಾಗಿರುವ ಪ್ಲಾಸ್ಟಿಕ್ ತ್ಯಾಜ್ಯವೂ ಘಟಕದಲ್ಲೇ ಉಳಿದಿದೆ ಎಂದು ಆರೋಪಿಸಿರುವ ಸ್ಥಳೀಯರು, ಸದ್ಯ ಸಂಗ್ರಹವಾಗುವ ಹಸಿ ತ್ಯಾಜ್ಯವನ್ನು ಗೊಬ್ಬರ ತಯಾರಿಕಾ ಘಟಕದಲ್ಲಿ ಸಮರ್ಪಕವಾಗಿ ಬಳಸುವ ಬದಲು ಘಟಕದ ಹಿಂಭಾಗದಲ್ಲಿ ತೋಡಿರುವ ಗುಂಡಿಗೆ ಹಾಕಿ ಮಣ್ಣಿನಿಂದ ಮುಚ್ಚಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಶಾಂತಿನಗರ ಪ್ರದೇಶದಲ್ಲಿ ಅಂಗನವಾಡಿ ಕೇಂದ್ರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ದೇವಸ್ಥಾನ, ಹಿಂದೂ ರುದ್ರಭೂಮಿ ಹಾಗೂ ನೂರಾರು ಮನೆಗಳಿದ್ದು, ತ್ಯಾಜ್ಯ ನಿರ್ವಹಣೆಯ ಅವ್ಯವಸ್ಥೆಯಿಂದ ಪರಿಸರ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಆತಂಕ ಮೂಡಿದೆ.
ಹಸಿ ಹಾಗೂ ಇತರ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ಭೂಮಿಯಲ್ಲಿ ಹೂತು ಹಾಕುವುದರಿಂದ ಮಣ್ಣು ಮತ್ತು ಅಂತರ್ಜಲ ಕಲುಷಿತಗೊಳ್ಳುವ ಸಾಧ್ಯತೆಯಿದ್ದು, ಸಾಂಕ್ರಾಮಿಕ ರೋಗಗಳ ಭೀತಿಯೂ ಎದುರಾಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಗ್ರಾಮ ಪಂಚಾಯಿತಿಗೆ ಹಲವು ಬಾರಿ ದೂರು ನೀಡಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಅವರು ಆರೋಪಿಸಿದ್ದಾರೆ.
ತ್ಯಾಜ್ಯ ನಿರ್ವಹಣೆಗೆ ಸಾರ್ವಜನಿಕರಿಂದ ಶುಲ್ಕ ಸಂಗ್ರಹಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಪಂಚಾಯಿತಿಯ ಜವಾಬ್ದಾರಿಯಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಸಮಸ್ಯೆ ಬಗೆಹರಿಸದಿದ್ದರೆ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ. ಈ ಕುರಿತು ಶಾಂತಿನಗರ ಶ್ರೀ ಮಹಾವಿಷ್ಣು ಸೇವಾ ಟ್ರಸ್ಟ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ತ್ರಿವೇಣಿ ಯುವಕ ಮಂಡಲ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಚರ್ಚೆ ನಡೆಸಿದ್ದಾರೆ.

































