ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 11ರಂದು ಆರಂಭವಾಗಿದ್ದು ಮಧ್ಯದಲ್ಲೇ ತಡೆಹಿಡಿಯಲ್ಪಟ್ಟ 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಮುಂದುವರಿಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಪಬ್ಲಿಕ್ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ರದ್ದುಗೊಳಿಸಿದ್ದ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಹೈಕೋರ್ಟ್ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ನ ವಿಭಾಗೀಯ ಪೀಠ ಎತ್ತಿಹಿಡಿದಿದೆ.
ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಎಕ್ಸಾಂಗೆ ಅಸ್ತು ಎಂದಿರುವ ಜತೆಗೇ ಉಳಿದ ವಿಷಯಗಳ ಪರೀಕ್ಷೆ ನಡೆಸಲು ಸೂಕ್ತ ಮತ್ತು ತುರ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಿತು.
ಸೋಮವಾರದಿಂದಲೇ ಪರೀಕ್ಷೆ: ಸರ್ಕಾರ ಹೇಳಿಕೆ
5, 8 ಮತ್ತು 9ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಸೋಮವಾರದಿಂದಲೇ ನಡೆಸುವ ಬಗ್ಗೆ ಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ. ಈಗಾಗಲೇ ಐದನೇ ತರಗತಿ ನಾಲ್ಕು ವಿಷಯಗಳ ಪರೀಕ್ಷೆ ಮುಗಿದಿವೆ. 8 ಹಾಗೂ 9 ತಗರತಿಗಳ ಎರಡೆರಡು ವಿಷಯಗಳ ಪರೀಕ್ಷೆ ನಡೆದಿವೆ. 11ನೇ ತರಗತಿ ಎಲ್ಲಾ ವಿಷಯಗಳ ಪರೀಕ್ಷೆ ಮುಕ್ತಾಯವಾಗಿದ್ದು ಫಲಿತಾಂಶ ಹೊರ ಬರಬೇಕಿದೆ.