ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 5, 8, 9ನೇ ತರಗತಿಯ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಇಲಾಖೆ ಪ್ರಕಟಿಸಿಲ್ಲ. ಇದು ಪೋಷಕರು ಮತ್ತು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಕೇಂದ್ರ ಪಠ್ಯಕ್ರಮದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು. ಈ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದ ದಾಖಲಾತಿ ಪಡೆಯಲು ಮುಂದಾಗಿದ್ದಾರೆ. ಆದರೆ ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟವಾಗಿಲ್ಲ.
ಕೇಂದ್ರ ಪಠ್ಯಕ್ರಮದ ನವೋದಯ ವಸತಿ ಶಾಲೆ ಸೇರಿದ್ದಂತೆ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಇತರೆ ವಸತಿ ಶಾಲೆಗಳ ಆಯ್ಕೆಗೆ ಈಗಾಗಲೇ ಪ್ರವೇಶ ಪರೀಕ್ಷೆಗಳು ನಡೆದಿವೆ. 5, 8, 9ನೇ ತರಗತಿಯ ಮಕ್ಕಳ ಶಾಲಾ ಫಲಿತಾಂಶ ಪ್ರಕಟವಾಗದ ಹಿನ್ನೆಲ್ಲೆಯ ಆಯ್ಕೆ ಪಟ್ಟಿ ಪ್ರಕಟಿಸಲು ವಸತಿ ಶಾಲೆಗಳಿಗೆ ಸಾಧ್ಯವಾಗುತ್ತಿಲ್ಲ.
ಫಲಿತಾಂಶ ಇಲ್ಲದ ಕಾರಣಕ್ಕೆ ಅನೇಕ ವಿದ್ಯಾರ್ಥಿಗಳಿಗೆ ಬೇರೆ ಶಾಲೆಗಳಿಗೆ ವರ್ಗಾವಣೆ ಸಾಧ್ಯವಾಗುತ್ತಿಲ್ಲ. ಜೊತೆಗೆ ಕೇಂದ್ರ ಪಠ್ಯಕ್ಕೆ ದಾಖಲಾತಿ ಪಡೆಯಲು ಕಷ್ಟವಾಗುತ್ತಿದೆ. ಹೀಗಾಗಿ ಪೋಷಕರು ಮಕ್ಕಳ ಹಕ್ಕುಗಳ ಆಯೋಗದ ಮೊರೆ ಹೋಗಿದ್ದಾರೆ. ಮಕ್ಕಳ ಹಕ್ಕುಗಳ ಆಯೋಗ ಮದ್ಯ ಪ್ರವೇಶ ಮಾಡಿದ್ದು, ಕೂಡಲೆ ಫಲಿತಾಂಶ ಪ್ರಕಟಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದೆ.
ಬೋರ್ಡ್ ಪರೀಕ್ಷೆ ವಿರೋಧಿಸಿ ಕೆಲ ಖಾಸಗಿ ಶಾಲಾ ಸಂಘಟನೆಗಳು ಹೈಕೋರ್ಟ್ ಮೊರೆ ಹೋಗಿದ್ದವು. ಸಂಘಟನೆಗಳ ಮನವಿ ಪುರಸ್ಕರಿಸಿದ್ದ ಏಕ ಸದಸ್ಯ ನ್ಯಾಯಪೀಠ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿತ್ತು. ನಂತರ ಆ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ತಡೆ ನೀಡಿತ್ತು. ನಂತರ ಸಂಘಟನೆಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ಇದೇ ಮಾರ್ಚ್ 11ರಿಂದ ಆರಂಭವಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಮಾರ್ಚ್ 13ರಂದು ಸ್ಥಗಿತಗೊಳಿಸಲಾಗಿತ್ತು. ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿತ್ತು.
ಏಪ್ರಿಲ್ 6ರಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಇಲಾಖೆ ಮುಂದಾಗಿತ್ತು. ಆದರೆ ಸುಪ್ರಿಂ ಕೋರ್ಟ್ ತಡೆ ನೀಡಿದೆ.