16 ವರ್ಷದ ಬಾಲೆಯೊಬ್ಬಳು ತೀವ್ರ ರಕ್ತಸ್ರಾವದಿಂದಾಗಿ ದಾರುಣವಾಗಿ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ಆಕೆಯ ಸಾವಿನ ಹಿನ್ನೆಲೆಯನ್ನು ತೆರೆದಿಟ್ಟಿದೆ.
ಆಕೆ ಸುಮಾರು ನಾಲ್ಕೂವರೆ ತಿಂಗಳ ಗರ್ಭಿಣಿ ಎಂಬ ಆಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ.
ಕಾಸರಗೋಡಿನ ವಳ್ಳರಿಕುಂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿತ್ತು. ಇದೀಗ ಮರಣೋತ್ತರ ಪರೀಕ್ಷೆ ಘಟನೆಯ ಇನ್ನೊಂದು ಮಗ್ಗುಲನ್ನು ತೆರೆದಿಟ್ಟಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಗರ್ಭಪಾತ ಮಾಡಿಕೊಳ್ಳಲು ಯಾವುದೋ ಔಷಧವನ್ನು ಸೇವಿಸಿರಬಹುದೆಂಬ ಗಂಭೀರ ಶಂಕೆ ವ್ಯಕ್ತವಾಗಿದೆ. ಈ ಔಷಧದ ಅಡ್ಡಪರಿಣಾಮದಿಂದ ತೀವ್ರ ರಕ್ತಸ್ರಾವ ಉಂಟಾಗಿ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಾಲಕಿಯ ಸಹಪಾಠಿಯೊಬ್ಬನನ್ನು ತೀವ್ರ ನಿಗಾದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ.
ಬಾಲಕಿಯನ್ನು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಶುಕ್ರವಾರ ರಾತ್ರಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆಯೇ ಆಕೆ ಕೊನೆಯುಸಿರೆಳೆದಿದ್ದಳು. ಮಂಗಳೂರಿನ ಆಸ್ಪತ್ರೆಯಲ್ಲಿ ನಡೆಸಿದ ಮರಣೋತ್ತರ ಪರೀಕ್ಷೆಯು ಆಕೆಯ ಗರ್ಭಧಾರಣೆಯನ್ನು ದೃಢಪಡಿಸಿದ್ದು, ಸಾವಿನ ನಿಖರ ಕಾರಣವನ್ನು ತಿಳಿಯಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.