ಮಂಗಳೂರು:ಮಹಿಳೆಯೋರ್ವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಲೆ ಸ್ಕೂಟರ್‌ನಲ್ಲಿ ಬಂದ ಖದೀಮರು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋಗಿದ್ದು ಇದೀಗ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ರಾಶಿಕ್ ಎಂದು ಗುರುತಿಸಲಾಗಿದೆ.
ಆಗಸ್ಟ್ 9ರಂದು ರಾತ್ರಿ ನಗರದ ನ್ಯೂ ಫೀಲ್ಡ್ ಸ್ಟ್ರೀಟ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 65 ವರ್ಷ ಪ್ರಾಯದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಸ್ಕೂಟರ್ ವಾಹನದಲ್ಲಿ ಬಂದು ಎಳೆದುಕೊಂಡು ಹೋದ ಬಗ್ಗೆ ನೀಡಿದ ದೂರಿನಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಪೊಲೀಸರ ತಂಡ ಕಾರ್ಯಾಚರಿಸಿ ಸೆ.11ರಂದು ಮಂಗಳೂರು ನಗರದ ಕೇಂದ್ರ ಮಾರುಕಟ್ಟೆ ಬಳಿ ಪ್ರಕರಣದ ಓರ್ವ ಆರೋಪಿಯನ್ನು ದಸ್ತಗಿರಿ ಮಾಡಿ ಆತನ ವಶದಲ್ಲಿದ್ದ ಸುಮಾರು 4,50,000 ಲಕ್ಷ ರೂಪಾಯಿ ಮೌಲ್ಯದ 42ಗ್ರಾಂ ತೂಕದ ಚಿನ್ನದ ಸರವನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.