ಕಾಪು ತಾಲೂಕಿನ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಟ್ಟು ಪ್ರದೇಶದಲ್ಲಿ ನದಿ ತೀರದ ಬಳಿ ಹಸುವಿನ ರುಂಡವೊಂದು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ನಿರ್ಜನ ಪ್ರದೇಶವೆಂದು ಪಾಪನಾಶಿನಿ ನದಿಯಲ್ಲಿ ದುಷ್ಕರ್ಮಿಗಳು ಹಸುವಿನ ತ್ಯಾಜ್ಯವನ್ನು ಇಲ್ಲಿ ಎಸೆದಿರಬಹುದೆಂದು ಶಂಕಿಸಲಾಗಿದೆ. ಮಾಹಿತಿ ತಿಳಿದ ತತ್ ಕ್ಷಣ ಶಿರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.
ಶಿರ್ವ ವಿಷ್ಣುಮೂರ್ತಿ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳ ಪುಣ್ಯಸ್ನಾನ ಹಾಗೂ ಧಾರ್ಮಿಕ ಆಚರಣೆಗಳು ನಡೆಯುವ ಪವಿತ್ರ ಸ್ಥಳದಲ್ಲೇ ಹಸುವಿನ ಅವಶೇಷ ಪತ್ತೆಯಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್‌ನ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ, ಪ್ರಕರಣದ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಒತ್ತಾಯಿಸಿದ್ದಾರೆ.
ದುಷ್ಕರ್ಮಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಶಿರ್ವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
























