ಜುಲೈ 31 ರ ಶುಕ್ರವಾರ ಬೆಳಗಿನ ಜಾವ 3:30 ರ ಸುಮಾರಿಗೆ ಇಲ್ಲಿನ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಬಾರ್ಕೂರಿನ ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಎಂದು ಗುರುತಿಸಲಾಗಿದೆ.
ಐವನ್ ಹಲವಾರು ವ್ಯವಹಾರಗಳಲ್ಲಿ ಭಾಗಿಯಾಗಿದ್ದರು ಎಂದು ವರದಿಯಾಗಿದೆ. ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಐವನ್ ಅವರು ಮಹಿಳೆಯೊಬ್ಬರೊಂದಿಗೆ ಕಾರಿನಲ್ಲಿ ಬಂದಿದ್ದಾಗ ಹಂತಕರು ಸಮೀಪದಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆತನ ಜೊತೆಗಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಈ ಕೊಲೆಗೆ ಆರ್ಥಿಕ ಅಥವಾ ಇತರ ವ್ಯವಹಾರಕ್ಕೆ ಸಂಬಂಧಿಸಿದ ವಿವಾದಗಳು ಕಾರಣವಾಗಿರಬಹುದು ಎಂದು ತಿಳಿದುಬಂದಿದೆ.
ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ಪಟ್ಟಣ ಪೊಲೀಸ್ ಇನ್ಸ್‌ಪೆಕ್ಟರ್ ಜಯರಾಮ್ ಗೌಡ, ಪಿಎಸ್‌ಐಗಳಾದ ನಂಜಾ ನಾಯಕ್, ಪುಷ್ಪಾ ಮತ್ತು ಅನೂಪ್ ನಾಯಕ್ ಸೇರಿದಂತೆ ಇತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಅಪರಾಧ ತನಿಖಾಧಿಕಾರಿ ತಂಡವೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
























