ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ರಾಷ್ಟ್ರೀಯ ಹೆದ್ದಾರಿ–75ರ ಉಪ್ಪಿನಂಗಡಿ ಗ್ರಾಮದ ಮಠ ಸಮೀಪ ತಡೆದು ವಶಪಡಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕನ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.
ಆಗಸ್ಟ್ 3ರಂದು ನಡೆದ ಕಾರ್ಯಾಚರಣೆಯಲ್ಲಿ KA-13-AA-6340 ನೋಂದಣಿಯ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಕಾಡು ಜಾತಿಯ ಮರದ ದಿಮ್ಮಿಗಳನ್ನು ಸಾಗಿಸಲಾಗುತ್ತಿತ್ತು. ವಾಹನ ಹಾಗೂ ವಶಪಡಿಸಿಕೊಂಡ ಮರದ ಒಟ್ಟು ಮೌಲ್ಯ ಸುಮಾರು ₹10 ಲಕ್ಷ ಎಂದು ಅಂದಾಜಿಸಲಾಗಿದೆ.
ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಲೋಕೇಶ್ ಅವರ ಪುತ್ರ ರೋಹಿತ್ ಎಸ್. (20) ವಿರುದ್ಧ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಹೆಚ್.ಪಿ. ರಾಘವೇಂದ್ರ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್, ಗಸ್ತು ಅರಣ್ಯ ಪಾಲಕರಾದ ವಿನಯಚಂದ್ರ, ದೀಕ್ಷಾ ಕೆ. ಹಾಗೂ ವಾಹನ ಚಾಲಕ ಕಿಶೋರ್ ಕುಮಾರ್ ಕೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
























