tamanvi
ಅಪರಾಧ

ಪ್ರಚೋದನಾಕಾರಿ ಭಾಷಣ ಪ್ರಕರಣ: ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: 2015ರಲ್ಲಿ ನಡೆದ ಪ್ರಚೋದನಾಕಾರಿ ಭಾಷಣ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯವು ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದೆ.

2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಬೆಳ್ತಂಗಡಿ ವಲಯದ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪದಡಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 315/2015ರಡಿ ಭಾರತೀಯ ದಂಡ ಸಂಹಿತೆಯ (IPC) ಕಲಂ 153(A) ಹಾಗೂ 295(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಅಂದಿನ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಹಾಗೂ ತನಿಖಾಧಿಕಾರಿಯಾಗಿದ್ದ ರವಿ ಬಿ.ಎಸ್. ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು ಭಾರತೀಯ ದಂಡ ಸಂಹಿತೆಯ ಕಲಂ 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಆಶೀತಾ ಅವರು ಸಮರ್ಥವಾಗಿ ವಾದ ಮಂಡಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119