ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಜೈಮುತ್ತಾ (23) ಹಾಗೂ ಮುತ್ತು (28) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೊಲೆರೋ ಪಿಕ್‌ಅಪ್ ವಾಹನ, ಡೀಸೆಲ್ ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 3ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿ.ಎಚ್.ಸಿ. 516 ಶ್ರೀಧರ್ ಹಾಗೂ ಪಿ.ಸಿ. 453 ರವಿರಾಜ್ ಅವರು ಬೈಕ್‌ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದರು. ಈ ವೇಳೆ ಅಲಂಪಾಡಿ ಕ್ರಾಸ್ ಬಳಿ ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ವೊಂದರ ಬಳಿ ಬೊಲೆರೋ ಪಿಕ್‌ಅಪ್ ವಾಹನ ಅನುಮಾನಾಸ್ಪದವಾಗಿ ನಿಂತಿರುವುದು ಪೊಲೀಸರ ಗಮನಕ್ಕೆ ಬಂದಿದೆ.
ಪೊಲೀಸರು ಸ್ಥಳಕ್ಕೆ ತೆರಳುತ್ತಿದ್ದಂತೆ ವಾಹನದ ಬಳಿ ಇದ್ದ ಮೂವರು ವ್ಯಕ್ತಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಬೆನ್ನಟ್ಟಿ ಇಬ್ಬರನ್ನು ಚಾಣಾಕ್ಷತನದಿಂದ ಹಿಡಿದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಕೃತ್ಯಕ್ಕೆ ಬಳಸಿದ್ದ ವಾಹನ ಸೇರಿದಂತೆ ಡೀಸೆಲ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
























