ಲಕ್ಕೋ: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 10 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆಯು ಜ.28ರ ಮಂಗಳವಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಸಂಭವಿಸಿದೆ ಎನ್ನಲಾಗಿದೆ. ಹಲವಾರು ಮಂದಿ ಗಾಯಗೊಂಡಿದ್ದು, ಹೆಚ್ಚಿನವರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಆಂಬ್ಯುಲೆನ್ಸ್ ಗಳು ಘಟನಾ ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
‘ಎರಡನೇ ಶಾಹಿ ಸ್ನಾನ’ದ ದಿನವಾದ ಮೌನಿ ಅಮಾವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸುಮಾರು 15 ಕೋಟಿ ಜನ ಸೇರಿದ್ದರು. ಬ್ಯಾರಿಕೇಡ್ ತಳ್ಳಿ, ನೂಕುನುಗ್ಗಲು ಉಂಟಾದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಹಲವಾರು ಉಸಿರುಗಟ್ಟಿ ಅಸ್ವಸ್ಥರಾಗಿದ್ದಾರೆ.
ಪ್ರಯಾಗ್‌ರಾಜ್‌ನಲ್ಲಿರುವ ತ್ರಿವೇಣಿ ಸಂಗಮದಲ್ಲಿ ಬುಧವಾರ (ಜ.29) ಮುಂಜಾನೆ ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಲು ಹಲವಾರು ಜನರು ಆಗಮಿಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯ ಪರಿಣಾಮ ಎರಡನೇ ಅಮೃತ ಸ್ನಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಖಾಡಾ ಪರಿಷತ್ ಅಮೃತ ಸ್ನಾನವನ್ನು ರದ್ದುಗೊಳಿಸಿದೆ ಎಂದು ವರದಿ ತಿಳಿಸಿದೆ.
ಭಕ್ತರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.