ಸೋಮವಾರ ಮಧ್ಯ ರಾತ್ರಿ ಮಂಜೇಶ್ವರದ ವಾಮಂಜೂರಿನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ (Accident) ಮೂವರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.
ಉಪ್ಪಳ ಪೈವಳಿಕೆ ಸಮೀಪದ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ವರುಣ್ ಮತ್ತು ಕೃಷ್ಣ ಮೃತಪಟ್ಟವರಾಗಿದ್ದು, ಇನ್ನು
ಉಪ್ಪಿನಂಗಡಿ ಮೂಲದ ರತನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮಾಹಿತಿ ಪ್ರಕಾರ, ಸೋಮವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.