ಪುತ್ತೂರು: ಪುತ್ತೂರು-ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪ ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮೇ 11ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ KSRTC ಬಸ್ (KA19 F 3317) ಹಾಗೂ ಮಾಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ (KA19H M2175) ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಗಾಯಾಳುಗಳಲ್ಲಿ ಓರ್ವನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟ ಹಾಗೂ ಗಾಯಗೊಂಡ ಸವಾರರಿಬ್ಬರೂ ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದವರೆಂದು ತಿಳಿದುಬಂದಿದೆ.
ಅಪಘಾತದ ಪರಿಣಾಮವಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿ, ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದವು.