ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭಾರೀ ಮಳೆಗೆ ಮತ್ತೆ ಗುಡ್ಡ ಕುಸಿದಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಣ್ಣು ಹಾಗೂ ಮರಗಳು ರಸ್ತೆಗೆ ಉರುಳಿಬಿದ್ದ ಪರಿಣಾಮ, ನೂರಾರು ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಪ್ರದೇಶದಲ್ಲಿ ನಡೆಯುತ್ತಿರುವ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಯಾವುದೇ ವೈಜ್ಞಾನಿಕ ಕ್ರಮ ಅಥವಾ ಮುನ್ನೆಚ್ಚರಿಕೆಗಳನ್ನು ಅನುಸರಿಸದೆ ಗುಡ್ಡವನ್ನು ಕಡಿದಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಮಳೆಗಾಲ ಆರಂಭವಾದಾಗಿನಿಂದ ಮಣ್ಣು ಸಡಿಲಗೊಂಡು ಪದೇ ಪದೇ ಕುಸಿಯುತ್ತಿದ್ದು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.