ಮೂಡುಬಿದಿರೆ: ತಾಲೂಕಿನ ಬನ್ನಡ್ಕ ಪ್ರದೇಶದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಕಾರು-ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಿಯುಸಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮಾರ್ಪಾಡಿ ಗ್ರಾಮದ ಕೋಟೆಬಾಗಿಲು ನಿವಾಸಿಗಳಾದ ಸದಾನಂದ ಸುವರ್ಣ ಮತ್ತು ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಕಾಮಗಾರಿ ಹಂತದಲ್ಲಿರುವ ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ದೈವಸ್ಥಾನದ ಸಮೀಪ ಈ ದುರಂತ ನಡೆದಿದೆ. ಘಟನೆಯ ವೇಳೆ ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಅವರೊಂದಿಗೆ ಶ್ರವಣ್ ಸಹ ಸವಾರರಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ.
ಕಾರ್ಕಳ ದಿಕ್ಕಿನಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಶ್ರವಣ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
























