tamanvi
ಅಪಘಾತ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ| ಧರ್ಮಸ್ಥಳ ಯಾತ್ರೆ ದುರಂತದಲ್ಲಿ ಮೂವರು ಯುವಕರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಮೂಡಿಗೆರೆ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ ಮೂವರು ಯುವಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.

ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ನಿವಾಸಿಗಳಾದ ಜ್ಞಾನೇಶ್ (28), ಮೋಹನ್ (30) ಹಾಗೂ ಗುರುಕಿರಣ್ (28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪ್ರೇಮಕುಮಾರ್ ಹಾಗೂ ಹೃತಿಕ್ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಂದೇ ಗ್ರಾಮದ ಯುವಕರು ಮಾರುತಿ ಸ್ವಿಫ್ಟ್ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಬೆಳಗಿನ ಜಾವ ಕೊಟ್ಟಿಗೆಹಾರ ಸಮೀಪ ಕಾರು ಬರುತ್ತಿದ್ದ ವೇಳೆ ಚಾಲಕನಿಗೆ ನಿದ್ರೆ ಬಂದ ಹಿನ್ನೆಲೆಯಲ್ಲಿ ಕಾರು ರಸ್ತೆ ಬದಿಯ ಎಡಭಾಗದ ಬಾಕ್ಸ್ ಚರಂಡಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಸಿಲುಕಿಕೊಂಡಿದ್ದರು.

ಅಪಘಾತದ ಶಬ್ದ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರು ಮೃತಪಟ್ಟಿದ್ದರು. ಗಾಯಗೊಂಡ ಇಬ್ಬರಿಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts