ಅಂಕೋಲಾ: ಲಾರಿ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮದಲ್ಲಿ ನಡೆದಿದೆ.
ಕುಮಟಾದಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಅಂಕೋಲಾ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಒಂದೂವರೆ ವರ್ಷದ ಗಂಡು ಮಗು ಸ್ಥಳದಲ್ಲೇ ಮೃತಪಟ್ಟಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಸ್ಥಳೀಯ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುತ್ತಿದ್ದಾರೆ.
























