ಮಂಗಳೂರು : ಒಮನ್‌ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರಿನ ಯುವಕನೊಬ್ಬ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಪ್ರಕರಣದ ಹಿಂದೆ ಪ್ರೇಮ ವೈಫಲ್ಯ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಸೋಮೇಶ್ವರ ನಿವಾಸಿ ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಅವರು ಕಳೆದ ಒಂದೂವರೆ ವರ್ಷಗಳಿಂದ ಒಮನ್‌ನಲ್ಲಿ ಲಿಫ್ಟ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಸುಮಾರು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು ಬಳಿಕ ಮತ್ತೆ ಕೆಲಸಕ್ಕೆ ಮರಳಿದ್ದರು ಎಂದು ತಿಳಿದುಬಂದಿದೆ.
ಸೋಮೇಶ್ವರದ ಚಂದ್ರ-ದೀಪಾ ದಂಪತಿಯ ಪುತ್ರನಾದ ಪುನೀತ್, ಕಳೆದ ನಾಲ್ಕು ವರ್ಷಗಳಿಂದ ಉರ್ವಾ ನಿವಾಸಿ ಯುವತಿಯನ್ನು ಪ್ರೀತಿಸುತ್ತಿದ್ದನು ಎನ್ನಲಾಗಿದೆ. ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಯುವತಿಯೊಂದಿಗೆ ತೆಗೆದ ಚಿತ್ರಗಳನ್ನು ಹಂಚಿಕೊಂಡಿದ್ದನು ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚಿನ ದಿನಗಳಲ್ಲಿ ಯುವತಿ ದೂರವಾಣಿ ಕರೆಗಳಿಗೆ ಸ್ಪಂದಿಸದೇ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದುದರಿಂದ ಮನನೊಂದು ಈ ಕಠಿಣ ನಿರ್ಧಾರ ಕೈಗೊಂಡಿರಬಹುದೆಂದು ಕುಟುಂಬ ಮೂಲಗಳು ತಿಳಿಸಿವೆ.
ಈ ಸಂಬಂಧ ಸ್ಥಳೀಯ ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.






















