ಕರಾವಳಿ

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಅಸ್ತಿತ್ವಕ್ಕೆ | ಮಾರ್ಚ್ 3ರಂದು ಸಾಮೂಹಿಕ ಧರಣಿಗೆ ನಿರ್ಧಾರ!

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ “ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ” ಹಾಗೂ ಸಮಾನ ಮನಸ್ಕ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಾರ್ಚ್ 3ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಬೃಹತ್ ಸಾಮೂಹಿಕ ಧರಣಿ ನಡೆಸಲು ತೀರ್ಮಾನಿಸಲಾಗಿದೆ.

gl

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್‌ಗಳನ್ನು ತೆರೆಯಲು ಸಿದ್ಧತೆಗಳು ನಡೆಯುತ್ತಿರುವ ಹಿನ್ನೆಲೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳು ಹಾಗೂ ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಸಂಬಂಧಿಸಿದಂತೆ ಸಮಾಲೋಚನಾ ಸಭೆ ನಡೆಸಿದರು.

ಮಾಜಿ ಸಚಿವ ಬಿ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಅವರು ಮುಂದಿನ ಹೋರಾಟಗಳ ಕುರಿತು ಮಾರ್ಗದರ್ಶನ ನೀಡಿದರು.

ಸಭೆಯ ಅಂತ್ಯದಲ್ಲಿ “ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ, ಬಂಟ್ವಾಳ” ರಚಿಸಲು ಹಾಗೂ ಟೋಲ್ ಗೇಟ್ ತೆರವುಗೊಳ್ಳುವವರೆಗೆ ಹೋರಾಟ ಮುಂದುವರಿಸಲು ನಿರ್ಧರಿಸಲಾಯಿತು. ಹೋರಾಟ ಸಮಿತಿಗೆ ಬಿ. ರಮಾನಾಥ ರೈ ಅವರನ್ನು ಗೌರವಾಧ್ಯಕ್ಷರಾಗಿ, ಬಿ. ಶೇಖರ್ ಹಾಗೂ ಮೋಹನ್ ಶೆಟ್ಟಿ ಅವರನ್ನು ಸಂಚಾಲಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮಾರ್ಚ್ 3ರಂದು ನಡೆಯಲಿರುವ ಸಾಮೂಹಿಕ ಧರಣಿಯ ಬಳಿಕ ಮುಂದಿನ ಹಂತದಲ್ಲಿ ಇನ್ನಷ್ಟು ತೀವ್ರ ಹೋರಾಟಗಳನ್ನು ಸಂಘಟಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts