ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ಅವರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಎಐಸಿಸಿ ಪ್ರಕಟಿಸಿದ್ದು, ದಕ್ಷಿಣ ಕನ್ನಡದ ಬಹುನಿರೀಕ್ಷಿತ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪದ್ಮರಾಜ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಪದ್ಮರಾಜ್ ಪೂಜಾರಿ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದರು.
ಕಳೆದ ಎಂಟು ವರ್ಷಗಳಿಂದ ಕೆ. ಹರೀಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸದ್ಯ ಅವರು ಮೆಸ್ಕಾಂ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅವರ ಅವಧಿಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸತತ ಹಿನ್ನಡೆ ಅನುಭವಿಸಿದೆ ಎಂಬ ರಾಜಕೀಯ ಚರ್ಚೆಗಳ ನಡುವೆಯೇ ಇದೀಗ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬದಲಾವಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಲವು ನಾಯಕರ ನಡುವೆ ಪೈಪೋಟಿ ನಡೆದಿತ್ತು. 15ಕ್ಕೂ ಅಧಿಕ ಆಕಾಂಕ್ಷಿಗಳು ಹುದ್ದೆಗೆ ಅರ್ಜಿ ಸಲ್ಲಿಸಿ ಎಐಸಿಸಿ ವೀಕ್ಷಕರ ಮುಂದೆ ತಮ್ಮ ಹಕ್ಕು ಮಂಡಿಸಿದ್ದರು. ಅಂತಿಮವಾಗಿ ಎಐಸಿಸಿ ಪದ್ಮರಾಜ್ ರಾಮಯ್ಯ ಪೂಜಾರಿ ಅವರನ್ನು ಆಯ್ಕೆ ಮಾಡಿದೆ.
ಪದ್ಮರಾಜ್ ಪೂಜಾರಿ ಅವರ ನೇಮಕಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಬೆಂಬಲವೂ ಇತ್ತು ಎಂದು ತಿಳಿದುಬಂದಿದೆ.
ನೂತನ ಜಿಲ್ಲಾಧ್ಯಕ್ಷರ ನೇಮಕದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ ನೀಡುವ ನಿರೀಕ್ಷೆ ಪಕ್ಷದ ವಲಯದಲ್ಲಿ ಮೂಡಿದೆ.























