ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಸಂಘಟನೆಗೆ ಹೊಸ ಚುರುಕು: ಬೂತ್ ಮಟ್ಟದಿಂದ ಮರುಸಂಘಟನೆ; ನವೆಂಬರ್‌ನಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಿಂದ ಬಲಪಡಿಸುವ ಮೂಲಕ ಪಕ್ಷಕ್ಕೆ ಹೊಸ ಚುರುಕು ನೀಡಲಾಗುವುದು ಎಂದು ನೂತನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಪಕ್ಷಕ್ಕಾಗಿ ತಳಮಟ್ಟದಲ್ಲಿ ದುಡಿಯುವ ಕಟ್ಟಕಡೆಯ ಕಾರ್ಯಕರ್ತನಿಗೂ ಗೌರವ ಹಾಗೂ ಶಕ್ತಿ ತುಂಬುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದರು.
ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಎಲ್ಲರನ್ನು ಒಗ್ಗೂಡಿಸಿಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸಲಾಗುವುದು. ಮುಂದಿನ ಎಂಟು ದಿನಗಳಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಬೂತ್‌ಗಳಿಗೆ ಭೇಟಿ ನೀಡಿ ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರನ್ನು ನೇರವಾಗಿ ಭೇಟಿ ಮಾಡಲಾಗುವುದು ಎಂದು ತಿಳಿಸಿದರು.
ಬೂತ್‌ನಿಂದ ಜಿಲ್ಲಾ ಮಟ್ಟದವರೆಗೆ ಕಾರ್ಯಕರ್ತರನ್ನು ಒಗ್ಗೂಡಿಸಿ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ನವೆಂಬರ್ ಮೊದಲ ವಾರದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗುವುದು ಎಂದರು.
ಕರಾವಳಿ ಜಿಲ್ಲೆಗಳಿಗೆ ರಾಜ್ಯ ಸರ್ಕಾರದಿಂದ ₹32 ಸಾವಿರ ಕೋಟಿ ಅನುದಾನ ಮೀಸಲಿಟ್ಟಿರುವುದು ಪ್ರಮುಖ ಮೈಲಿಗಲ್ಲಾಗಿದೆ. ತುಳು ಭಾಷೆಗೆ ಎರಡನೇ ಅಧಿಕೃತ ಆಡಳಿತ ಭಾಷೆಯ ಮಾನ್ಯತೆ ನೀಡಿರುವುದು ಕಾಂಗ್ರೆಸ್ ಸರ್ಕಾರದ ಪ್ರಮುಖ ಸಾಧನೆಗಳಲ್ಲಿ ಒಂದಾಗಿದೆ. ಈ ವಿಚಾರಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ಪದ್ಮರಾಜ್ ಪೂಜಾರಿ ಹೇಳಿದರು.
ಎಂಟೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ಗುರಿ: ಹರೀಶ್ ಕುಮಾರ್
ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಪದ್ಮರಾಜ್ ಪೂಜಾರಿ ಅವರು ವಿದ್ಯಾರ್ಥಿ ದೆಸೆಯಿಂದಲೇ ಪಕ್ಷಕ್ಕಾಗಿ ದುಡಿದವರು. ಕಳೆದ ಎರಡೂವರೆ ವರ್ಷಗಳಲ್ಲಿ ಜಿಲ್ಲೆಯ ವಿವಿಧ ಬ್ಲಾಕ್‌ಗಳಿಗೆ ಭೇಟಿ ನೀಡಿ ಸಂಘಟನೆ ಕಟ್ಟಿದ ಪರಿಣಾಮ ಕಾರ್ಯಕರ್ತರಿಂದಲೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದರು.
ಪಕ್ಷದೊಳಗಿನ ಒಡಕಿನಿಂದ ಹಿನ್ನಡೆಯಾಗಿದೆ. ಇನ್ನು ಮುಂದೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಾವುಟ ಹಾರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸಬೇಕು ಎಂದು ಕರೆ ನೀಡಿದರು.
ಪಕ್ಷವನ್ನು ಗೆಲ್ಲಿಸುವುದು ಅಧ್ಯಕ್ಷರೊಬ್ಬರ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಕಾಂಗ್ರೆಸಿಗನ ಕರ್ತವ್ಯವೂ ಆಗಿದೆ ಎಂದು ಅವರು ಹೇಳಿದರು.
ಹುದ್ದೆಗಳು ‘ವಿಸಿಟಿಂಗ್ ಕಾರ್ಡ್’ಗೆ ಸೀಮಿತವಾಗದಿರಲಿ: ಮಂಜುನಾಥ ಭಂಡಾರಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಸಂಘಟನ್ ಸೃಜನ್ ಅಭಿಯಾನದಡಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಚುನಾವಣೆ ಮೂಲಕ ಪದ್ಮರಾಜ್ ಪೂಜಾರಿ ಆಯ್ಕೆಯಾಗಿದ್ದಾರೆ ಎಂದರು.
ಪಕ್ಷದ ಹುದ್ದೆಗಳು ಕೇವಲ ‘ವಿಸಿಟಿಂಗ್ ಕಾರ್ಡ್’ಗೆ ಸೀಮಿತವಾಗದೆ, ಸಕ್ರಿಯವಾಗಿ ದುಡಿಯುವವರಿಗೆ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬಾಕಿಯಿದ್ದು, ಮುಂದಿನ ಆರು ತಿಂಗಳು ಸಂಘಟನೆಗೆ ನಿರ್ಣಾಯಕವಾಗಿವೆ. ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹಿಂ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.


















