ಮಂಗಳೂರು: ನಗರದ ಪಡೀಲ್‌ನಲ್ಲಿರುವ ಕಾಂಚನ್ ಹುಂಡೈ ಶೋರೂಂ ಹಾಗೂ ವರ್ಕ್‌ಶಾಪ್‌ನಲ್ಲಿ ಶುಕ್ರವಾರ ರಾತ್ರಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಪೇಂಟಿಂಗ್ ಬೂತ್‌ನಲ್ಲಿದ್ದ ಒಂದು ಕಾರು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಶೋರೂಂ ಹೊರಭಾಗದಲ್ಲಿ ನಿಲ್ಲಿಸಿದ್ದ 8 ಕಾರುಗಳು ಬೆಂಕಿಯ ಶಾಖದಿಂದ ಹಾನಿಗೊಳಗಾಗಿವೆ.
ಕಾರುಗಳಿಗೆ ಬಣ್ಣ ಬಳಿಯುವ ಪೇಂಟಿಂಗ್ ಬೂತ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕದ್ರಿ ಹಾಗೂ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಎರಡು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು.
ಶುಕ್ರವಾರ ರಾತ್ರಿ ಸುಮಾರು 7.50ಕ್ಕೆ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಮಾಹಿತಿ ಲಭ್ಯವಾಗಿದ್ದು, ತಕ್ಷಣ ಸ್ಥಳಕ್ಕೆ ತೆರಳಿದ ಸಿಬ್ಬಂದಿ ಸುಮಾರು 20ರಿಂದ 25 ನಿಮಿಷಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದರಿಂದ ಬೆಂಕಿ ಶೋರೂಂನ ಇತರೆ ಭಾಗಗಳಿಗೆ ಹರಡುವುದು ತಪ್ಪಿದೆ.
ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.
ಪ್ರಭಾರ ಮುಖ್ಯ ಅಗ್ನಿಶಾಮಕ ಅಧಿಕಾರಿ ಶಂಕರ್ ಎಂ., ಕದ್ರಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಮೋದ್ ಹಾಗೂ ಪಾಂಡೇಶ್ವರ ಅಗ್ನಿಶಾಮಕ ಠಾಣಾಧಿಕಾರಿ ಪ್ರವೀಣ್ ಕೆ.ಎನ್. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಐವರು ಅಧಿಕಾರಿಗಳು ಹಾಗೂ 10 ಮಂದಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

























