ಮಂಗಳೂರು: ನಗರದ ಹೊರವಲಯದ ಜೋಕಟ್ಟೆ ಸಮೀಪದಲ್ಲಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಘಟಕದಲ್ಲಿ ಬುಧವಾರ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯ ಬಳಿಕ ಆಕಾಶದೆತ್ತರಕ್ಕೆ ದಟ್ಟ ಹೊಗೆ ಕಾಣಿಸಿಕೊಂಡಿದೆ.
MRPL ಆವರಣದ CHT (Hydro Sulphur Treatment) ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಸ್ಫೋಟದ ಭಾರೀ ಶಬ್ದವು ಮಂಗಳೂರಿನ ಹಲವು ಪ್ರದೇಶಗಳಲ್ಲಿ ಕೇಳಿಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಸ್ಫೋಟದ ಬಳಿಕ ಘಟಕದ ಭಾಗದಿಂದ ದಟ್ಟ ಹೊಗೆ ಆವರಿಸಿಕೊಂಡಿದ್ದು, ಬೆಂಕಿಯೂ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಜೋಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಫೋಟದ ಕಂಪನದ ಅನುಭವವಾಗಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಘಟನೆ ಸಂಭವಿಸಿದ ತಕ್ಷಣ ತುರ್ತು ಸೇವಾ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಸ್ಫೋಟಕ್ಕೆ ನಿಖರ ಕಾರಣವೇನು, ಘಟಕಕ್ಕೆ ಎಷ್ಟು ಪ್ರಮಾಣದ ಹಾನಿಯಾಗಿದೆ ಹಾಗೂ ಯಾವುದೇ ಸಾವು-ನೋವು ಸಂಭವಿಸಿದೆಯೇ ಎಂಬ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಮಂಗಳೂರು ವಿಮಾನ ನಿಲ್ದಾಣದ ಗಾಜುಗಳು ಪುಡಿಯಾಗಿವೆ ಎಂಬ ಮಾಹಿತಿ ಸದ್ಯಕ್ಕೆ ಅಧಿಕೃತವಾಗಿ ದೃಢಪಟ್ಟಿಲ್ಲ.
ಘಟನೆಯ ಕುರಿತು ಹೆಚ್ಚಿನ ವಿವರಗಳು ಅಧಿಕಾರಿಗಳಿಂದ ಲಭ್ಯವಾದ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ.























