ಕರಾವಳಿ

ಜಿಲ್ಲೆಯಲ್ಲಿ 42 ಪ್ರಮುಖ ಅಪಘಾತ ಸ್ಥಳಗಳಲ್ಲಿ ಶಾಶ್ವತ ಸುರಕ್ಷತಾ ಕ್ರಮಕ್ಕೆ ಎಸ್.ಪಿ. ಅರುಣ್‌ ಕುಮಾರ್‌ ಸೂಚನೆ | ಬೀದಿ ದೀಪವಿಲ್ಲದೆ ಅಪಘಾತ: ವಿದ್ಯುತ್‌ ದೀಪ ಅಳವಡಿಸಲು ನಿರ್ದೇಶನ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿರುವ ಸ್ಥಳಗಳನ್ನು ಗುರುತಿಸಿ, ಅಲ್ಲಿ ಸುಗಮ ಸಂಚಾರ ಹಾಗೂ ವಾಹನ ಸವಾರರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಅದರಲ್ಲೂ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಪದೇ ಪದೇ ಅಪಘಾತಗಳು ಸಂಭವಿಸಿ ಪ್ರಾಣಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ಅಪಘಾತ ವಲಯಗಳಲ್ಲಿ ತಕ್ಷಣವೇ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ತಿಳಿಸಿದರು.

ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು, ಅಗತ್ಯವಿರುವ ಕಡೆ ಟ್ರಾಫಿಕ್ ಸಿಗ್ನಲ್ ಅಳವಡಿಸುವುದು, ಎಚ್ಚರಿಕೆ ಹಾಗೂ ಮಾರ್ಗಸೂಚಿ ಫಲಕಗಳನ್ನು ಅಳವಡಿಸುವುದು ಸೇರಿದಂತೆ ವಿವಿಧ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಕೇವಲ ತಾತ್ಕಾಲಿಕ ಪರಿಹಾರಕ್ಕೆ ಸೀಮಿತವಾಗದೆ, ಮುಂದಿನ ದಿನಗಳಲ್ಲಿ ಅಪಘಾತಗಳು ಮರುಕಳಿಸದಂತೆ ಶಾಶ್ವತ ಪರಿಹಾರಗಳನ್ನು ರೂಪಿಸುವ ಅಗತ್ಯವಿದೆ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದಲ್ಲದೆ, ಜಿಲ್ಲೆಯ ಹಲವು ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಸಮಯದಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದಿರುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯವಿರುವ ಪ್ರದೇಶಗಳಲ್ಲಿ ಬೀದಿ ದೀಪಗಳನ್ನು ಅಳವಡಿಸುವಂತೆ ಸಂಬಂಧಪಟ್ಟ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮಾಹಿತಿ ನೀಡಿದ ಹೆದ್ದಾರಿ ಇಲಾಖೆ ಅಧಿಕಾರಿಗಳು, ಜಿಲ್ಲೆಯಲ್ಲಿ ಒಟ್ಟು 42 ಪ್ರಮುಖ ಅಪಘಾತ ಸ್ಥಳಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಂಚಾರ ನಿಯಮ ಉಲ್ಲಂಘನೆ: ಸಾವಿರಾರು ವಾಹನ ಸವಾರರ ವಿರುದ್ಧ ಪ್ರಕರಣ

2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಪೊಲೀಸ್ ಹಾಗೂ ಸಾರಿಗೆ ಇಲಾಖೆ ವತಿಯಿಂದ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಆರೋಪದಲ್ಲಿ 2,604 ಪ್ರಕರಣಗಳು ದಾಖಲಾಗಿವೆ.

ವಾಹನಗಳಿಗೆ ನಿಯಮಬಾಹಿರವಾಗಿ ಟಿಂಟೆಡ್ ಗ್ಲಾಸ್ ಅಳವಡಿಸಿದ ಸಂಬಂಧ ಒಟ್ಟು 33,703 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಮೂಲಕ 2025ರಲ್ಲಿ 73.89 ಲಕ್ಷ ರೂ. ಹಾಗೂ 2026ರಲ್ಲಿ 75.88 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.

ಅದೇ ರೀತಿ, ಕರ್ಕಶ ಶಬ್ದ ಹೊರಸೂಸುವ ಹಾರ್ನ್‌ಗಳನ್ನು ಅಳವಡಿಸಿಕೊಂಡು ಸಂಚರಿಸಿದ ವಾಹನಗಳ ವಿರುದ್ಧ 2,805 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಿಂದ 2025ರಲ್ಲಿ 7.44 ಲಕ್ಷ ರೂ. ಹಾಗೂ 2026ರಲ್ಲಿ 8.38 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಶಾಲಾ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸಾಗಿಸಿದ ಸಂಬಂಧ 974 ಪ್ರಕರಣಗಳು ದಾಖಲಾಗಿವೆ. ಮೀನು ಸಾಗಾಟದ ವಾಹನಗಳಿಂದ ತ್ಯಾಜ್ಯ ನೀರನ್ನು ರಸ್ತೆ ಮೇಲೆ ಹರಿಸುತ್ತಿರುವುದನ್ನು ತಡೆಯಲು ಕೂಡ ವಿಶೇಷ ಕ್ರಮ ಕೈಗೊಳ್ಳಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2026ರಲ್ಲಿ ಇಂತಹ ಉಲ್ಲಂಘನೆಗಳ ವಿರುದ್ಧ 535 ಪ್ರಕರಣ ದಾಖಲಿಸಿ, 2.65 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧದ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು. ನಿಯಮ ಪಾಲನೆ ಬಗ್ಗೆ ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಕಾನೂನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಎಸ್‌ಪಿ ಸೂಚಿಸಿದರು.

ಅಪಘಾತ ಪ್ರಕರಣ: 538 ಚಾಲನಾ ಪರವಾನಗಿ ಅಮಾನತು

ರಸ್ತೆ ಅಪಘಾತಗಳಿಗೆ ಕಾರಣವಾಗಿ ಜೀವಹಾನಿ ಸಂಭವಿಸಿದ 279 ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 538 ಚಾಲನಾ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಡಿಸಿಪಿ ರವಿಶಂಕರ್, ಎಸಿಪಿ ನಜ್ಮಾ ಫಾರೂಕಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ನಾಯಕ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ ಬಿ. ಶಿರೋಳ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು ಪಿಲಿಕುಳ ನಿಸರ್ಗಧಾಮ ಶೀಘ್ರವೇ ಮೃಗಾಲಯ ಪ್ರಾಧಿಕಾರಕ್ಕೆ ಹಸ್ತಾಂತರ’: ಸಚಿವ ರಾಮಲಿಂಗಾರೆಡ್ಡಿ

ಪಿಲಿಕುಳ ನಿಸರ್ಗಧಾಮವನ್ನು ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಅಂತಿಮ…