ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಸೆಮಿನಾರ್ ಸಭಾಂಗಣದಲ್ಲಿ 72ನೇ ರಾಷ್ಟ್ರೀಯ ವನ್ಯಜೀವಿ ಸಪ್ತಾಹ – 2026ಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ವಿಭಾಗ, ಪುತ್ತೂರು ಉಪವಿಭಾಗ ಹಾಗೂ ಪುತ್ತೂರು ವಲಯದ ಸಹಯೋಗದಲ್ಲಿ, ಕಾಲೇಜಿನ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ವಿಭಾಗಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ಅಧ್ಯಕ್ಷತೆ ವಹಿಸಿದ್ದರು. ವನ್ಯಜೀವಿ ಸಂರಕ್ಷಣೆ ಹಾಗೂ ಜೀವವೈವಿಧ್ಯ ರಕ್ಷಣೆಯ ಮಹತ್ವವನ್ನು ಅವರು ವಿವರಿಸಿದರು. ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಮಾತನಾಡಿ, ವಿದ್ಯಾರ್ಥಿಗಳು ವನ್ಯಜೀವಿ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರಕೃತಿ ಹಾಗೂ ವನ್ಯಜೀವಿಗಳ ರಕ್ಷಣೆಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಮಂಗಳೂರು ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಮಾತನಾಡಿ, ಕಾಡುಪ್ರಾಣಿಗಳಿಗೆ ಯಾವುದೇ ರೀತಿಯ ಹಾನಿ ಮಾಡದೆ ಅವುಗಳ ನೈಸರ್ಗಿಕ ಆವಾಸಸ್ಥಾನವನ್ನು ಗೌರವಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಪುತ್ತೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಪರೀಕ್ಷಾರ್ಥಿ) ರುದ್ರೇಗೌಡ ಬಿ.ವಿ. ಉಪಸ್ಥಿತರಿದ್ದರು. ಬಂಟ್ವಾಳದ ಎಸ್.ವಿ.ಎಸ್. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ವಿನಾಯಕ ಕೆ.ಎಸ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವನ್ಯಜೀವಿ ಸಂರಕ್ಷಣೆ, ಪರಿಸರ ಸಮತೋಲನ ಹಾಗೂ ಪರಿಸರೀಯ ಸುಸ್ಥಿರತೆಯ ಮಹತ್ವದ ಕುರಿತು ಮಾತನಾಡಿದರು.
ವನ್ಯಜೀವಿ ಸಪ್ತಾಹದ ಅಂಗವಾಗಿ ಪೂರ್ವಭಾವಿಯಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.
ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿನಿಯರಾದ ಮನಸಾ ಮತ್ತು ರಚನಾ ಪ್ರಾರ್ಥಿಸಿದರು. ತೃತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ದಿಲ್ಶಾನಾ ನಿರೂಪಿಸಿದರು. ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಸ್ವಾಗತಿಸಿದರು. ಉಪ ವಲಯ ಅರಣ್ಯಾಧಿಕಾರಿ ಉಲ್ಲಾಸ್ ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

























