ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಚುನಾವಣಾ ಆಯುಕ್ತರು ರಾಜೀನಾಮೆ ನೀಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಶೀಘ್ರದಲ್ಲೇ ಚುನಾವಣಾ ದಿನಾಂಕಗಳನ್ನು ಘೋಷಿಸಲಿದೆ. ಅರುಣ್ ಗೋಯಲ್ ಅವರ ಈ ಹೆಜ್ಜೆಯ ನಂತರ ಇದೀಗ ಚುನಾವಣಾ ಆಯೋಗದಲ್ಲಿ 2 ಹುದ್ದೆಗಳು ಖಾಲಿ ಇದೆ.
ಇದೀಗ ಚುನಾವಣಾ ವ್ಯವಸ್ಥೆಯ ಸಂಪೂರ್ಣ ಜವಾಬ್ದಾರಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಹೆಗಲ ಮೇಲೆ ಬಿದ್ದಿದೆ. ಅರುಣ್ ಗೋಯಲ್ ಅವರು ಮುಖ್ಯ ಚುನಾವಣಾ ಆಯುಕ್ತರೊಂದಿಗೆ ಚುನಾವಣಾ ತಯಾರಿಗಾಗಿ ಹಲವು ರಾಜ್ಯಗಳಿಗೆ ಭೇಟಿ ನೀಡಿದ್ದರು. ಇದೀಗ ದಿಢೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಸಂಬಂಧ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಶನಿವಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ, ‘ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, 2024ರ ಮಾರ್ಚ್ 09ರಿಂದ ಜಾರಿಗೆ ಬರಲಿದೆ ಎಂದು ಪರಿಗಣಿಸಲಾಗಿದೆ. ಅರುಣ್ ಗೋಯಲ್ 1985ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದಾರೆ. ಅವರು ನವೆಂಬರ್ 18, 2022 ರಂದು ಸ್ವಯಂ ನಿವೃತ್ತಿ ಪಡೆದಿದ್ದು ಮರುದಿನ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು. ಅವರ ನೇಮಕ ವಿವಾದಕ್ಕೀಡಾಗಿದ್ದು, ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ‘ಏನು ಆತುರ, ವಿಆರ್ಎಸ್ ತೆಗೆದುಕೊಂಡ ಮರುದಿನವೇ ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತ ಹುದ್ದೆಗೆ ನೇಮಿಸಲಾಯಿತು’ ಎಂದು ಸರ್ಕಾರವನ್ನು ಪ್ರಶ್ನಿಸಿತ್ತು.