ಬೆಂಗಳೂರು:ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ದಿಶೆಯಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸರ್ಕಾರಿ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್‌ಗಳಲ್ಲಿ ಖಾಲಿ ಇರುವ ಸುಮಾರು 2,000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಶಕಗಳಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯದ ಹಿನ್ನೆಲೆಯಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆ ಎಂದು ಹೇಳಿದರು. ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಶೇಕಡಾ 60 ರಿಂದ 70 ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಇರುವ ವಿಚಾರ ಸರ್ಕಾರದ ಗಮನದಲ್ಲಿದೆ ಎಂದರು.
ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ನೇಮಕಾತಿ ಪ್ರಕ್ರಿಯೆಗಳನ್ನು ವೇಗಗೊಳಿಸಲಾಗಿದೆ. ಈಗಾಗಲೇ 2024–25ನೇ ಸಾಲಿನಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,016 ಸಹಾಯಕ ಪ್ರಾಧ್ಯಾಪಕರನ್ನು ವಿವಿಧ ವಿಷಯಗಳಲ್ಲಿ ನೇಮಕ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.ಈ ಕ್ರಮದಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾಗುವ ಜೊತೆಗೆ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಕಾರ್ಯಕ್ಷಮತೆ ಮತ್ತಷ್ಟು ವೃದ್ಧಿಯಾಗುವ ನಿರೀಕ್ಷೆಯಿದೆ.


















