ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ದ.ಕ. ಜಿಲ್ಲಾಡಳಿತದ ಆಶ್ರಯದಲ್ಲಿ ನ.30ರಂದು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳಕ್ಕೆ 360ಕ್ಕೂ ಅಧಿಕ ಕಂಪನಿಗಳು ಹಾಗೂ 10,697 ಉದ್ಯೋಗಾಕಾಂಕ್ಷಿಗಳು ಆನ್ಲೈನ್ನಲ್ಲಿ ನೋಂದಾಯಿಸಿದ್ದಾರೆ ಎಂದು ನಿಗಮದ ಅಧ್ಯಕ್ಷೆ ಶಿವಕಾಂತಮ್ಮ ನಾಯಕ ತಿಳಿಸಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಸಂಜೆಯವರೆಗಿನ ಮಾಹಿತಿಯ ಪ್ರಕಾರ ದ.ಕ. ಜಿಲ್ಲೆಯ 4540, ಉಡುಪಿಯಿಂದ 1200, ಮಂಡ್ಯದಿಂದ 358, ಉ.ಕ.ದಿಂದ 276 ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಯುವ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ನೋಂದಣಿ ಮಾಡಿಸಿ ಕೊಂಡಿದ್ದಾರೆ ಎಂದರು.
ಹೊಸದಾಗಿ ಪದವಿ ಪಡೆದವರು ಹಾಗೂ ಅನುಭವಿ ಅಭ್ಯರ್ಥಿಗಳಿಬ್ಬರೂ ಒಂದೇ ಸೂರಿನಡಿ ಕಂಪನಿಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಎಂದು ಅವರು ಹೇಳಿದರು.
ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಜಿಲ್ಲಾಡಳಿತವು ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣ, ಕೆಎಸ್ಆರ್ಟಿಸಿ ಮತ್ತು ಮಂಗಳೂರು ರೈಲು ನಿಲ್ದಾಣದಿಂದ ಸೈಂಟ್ ಅಲೋಶಿಯಸ್ ಕಾಲೇಜಿನವರೆಗೆ ಫೀಡರ್ ಬಸ್ ಸೇವೆಗಳನ್ನು ವ್ಯವಸ್ಥೆಗೊಳಿಸಿದೆ. ಅಭ್ಯರ್ಥಿಗಳಿಗೆ ಮತ್ತು ಉದ್ಯೋಗದಾತರಿಗೆ ಉಚಿತ ಊಟ, ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳು ಹಾಗೂ ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು.
ಯುವನಿಧಿಯನ್ನು ಪಡೆಯುತ್ತಿರುವ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ದ.ಕ. ಜಿಲ್ಲೆಯಲ್ಲಿ ಸುಮಾರು 8000 ಮಂದಿ ಯುವ ನಿಧಿ ಫಲಾನುಭವಿಗಳಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಜಿ.ಪಂ. ಸಿಇಒ ನರ್ವಾಡೆ ವಿನಾಯಕ ಕರ್ಭಾರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ ಉಪಸ್ಥಿತರಿದ್ದರು.

















