ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣ ಸಂಬಂಧ ವಿದೇಶದಲ್ಲಿ ತಲೆಮರಿಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೂಡಲೇ ವಿದೇಶದಿಂದ ವಾಪಸ್ ಆಗುವಂತೆ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆಯ ಬಹಿರಂಗ ಪತ್ರ ಬರೆದಿರುವ ದೇವೇಗೌಡ, ಕೂಡಲೇ ವಾಪಸ್ ಬೆಂಗಳೂರಿಗೆ ಬರುವಂತೆ ಮೊಮ್ಮನಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಪ್ರಜ್ವಲ್ ರೇವಣ್ಣ ನೀನು ಎಲ್ಲೇ ಇದ್ದರೂ ಬಂದು ಪೊಲೀಸರ ಮುಂದೆ ಶರಣಾಗು, ವಿಚಾರಣೆಯನ್ನು ಎದುರಿಸು. ಯಾವುದೇ ಮುಲಾಜಿಲ್ಲದೇ ಮರ್ಜಿ ಇಲ್ಲದೇ ಬಂದು ಶರಣಾಗು ಎಂದು ಪತ್ರದಲ್ಲಿ ಖಡಕ್ ಆಗಿ ಹೇಳಿದ್ದಾರೆ.
ಇತ್ತೀಚೆಗಷ್ಟೇ ಅವರ ಚಿಕ್ಕಪ್ಪ ಎಚ್ಡಿ ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿ ಕೈಮುಗಿದು ಮನವಿ ಮಾಡುತ್ತೇನೆ ನನ್ನ ಹಾಗೂ ಎಚ್ಡಿ ದೇವೇಗೌಡರ ಮೇಲೆ ಗೌರವ ಇದ್ದರೆ 24 ಇಲ್ಲಾ 48 ಗಂಟೆಯಲ್ಲಿ ಬಂದು ಶರಣಾಗು ಎಂದು ಪ್ರಜ್ವಲ್ ರೇವಣ್ಣಗೆ ಮನವಿ ಮಾಡಿದ್ದರು. ಆದ್ರೆ, ಪ್ರಜ್ವಲ್ ಮಾತ್ರ ಟಿಕೆಟ್ ಬುಕ್ ಮಾಡಿ ಬಳಿಕ ಕ್ಯಾನ್ಸಲ್ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಅಜ್ಜ ದೇವೇಗೌಡ ಪ್ರಜ್ವಲ್ಗೆ ಎಚ್ಚರಿಕೆಯ ಬಹಿರಂಗ ಪತ್ರ ಬರೆದಿದ್ದಾರೆ.
ಪ್ರಜ್ವಲ್ಗೆ ದೇವೇಗೌಡ್ರು ಬರೆದ ಎಚ್ಚರಿಕೆ ಪತ್ರದಲ್ಲೇನಿದೆ?
ನಾನು ಮೇ 18ರಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾಗಿ ಮಾತನಾಡಿದ್ದೆ. ಆತ ನನಗೆ ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ ಅವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನವೇ ಪ್ರತಿಪಾದಿಸಿದ್ದಾರೆ.
ಹಸ್ತಕ್ಷೇಪ ಮಾಡುವುದಿಲ್ಲ:
ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಅದರಲ್ಲಿ ಯಾವುದೇ ಭಾವನೆಗೆ ಸಿಲುಕದೆ ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ಪತ್ರದಲ್ಲಿ ಹೇಳಿದ್ದಾರೆ.