ವಾಷಿಂಗ್ಟನ್: ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ನೀತಿಯನ್ನು ಟೀಕಿಸಿದ ಒಂದು ದಿನದ ಬಳಿಕ ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಹುದ್ದೆಯಿಂದ ಕೆಳಗೆ ಇಳಿದಿದ್ದಾರೆ. ಈ ಕುರಿತು ತಮ್ಮದೇ ಒಡೆತನದ ಸಾಮಾಜಿಕ ಮಾಧ್ಯಮ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ವಿಶೇಷ ಸರ್ಕಾರಿ ಉದ್ಯೋಗಿಯಾಗಿ ನನ್ನ ನಿಗದಿತ ಅವಧಿ ಕೊನೆಗೊಂಡಿದೆ. ಅನಗತ್ಯ ವೆಚ್ಚಗಳನ್ನು ಕಡಿತ ಮಾಡಲು ಅವಕಾಶ ನೀಡಿದ್ದಕ್ಕಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ (ಡಿಒಜಿಇ) ಕಾಲಕ್ರಮೇಣ ಬಲಗೊಳ್ಳಲಿದ್ದು, ಸರ್ಕಾರದ ಕಾರ್ಯವಿಧಾನ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.
ತೆರಿಗೆ ಬಿಲ್‌ಗೆ ಸಂಬಂಧಿಸಿ ಉಂಟಾಗಿರುವ ಭಿನ್ನಾಭಿಪ್ರಾಯದಿಂದ ಟ್ರಂಪ್ ಆಡಳಿತವನ್ನು ತೊರೆಯಲು ಮಸ್ಕ್ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಯಕ್ಕಿಂತ ಖರ್ಚು ಹೆಚ್ಚುವುದು ಡಿಒಜಿಇ ದಕ್ಷತೆಯ ಮೇಲೆ ಪರಿಣಾಮ ಬೀರಲಿದ್ದು, ದುರ್ಬಲಗೊಳಿಸಲಿದೆ ಎಂದು ಟ್ರಂಪ್ ತೀರ್ಮಾನದ ವಿರುದ್ಧ ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಎರಡನೇ ಅವಧಿಗೆ ಅಮೆರಿಕದ ಚುಕ್ಕಾಣಿ ಹಿಡಿದ ಡೊನಾಲ್ಡ್ ಟ್ರಂಪ್, ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ್ದ ಟೆಸ್ಲಾ ಮಾಲೀಕ ಎಲಾನ್ ಮಸ್ಕ್ ಅವರನ್ನು ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ (ಡಿಒಜಿಇ)ಯ ಉಸ್ತುವಾರಿಯಾಗಿ ನೇಮಿಸಿದ್ದರು. ಆಡಳಿತ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳುವುದರ ಜೊತೆಗೆ ಅನಗತ್ಯ ವೆಚ್ಚಗಳನ್ನು ಕಡಿತ ಮಾಡುವುದು ಈ ಇಲಾಖೆಯ ಉದ್ದೇಶವಾಗಿತ್ತು.
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಸ್ಕ್ ಅವರು ಡೊನಾಲ್ಡ್ ಟ್ರಂಪ್ ಪರ ಮತಯಾಚನೆ ಮಾಡಿದ್ದರು. ನಂತರ ಟ್ರಂಪ್ DOGE ಮುಖ್ಯಸ್ಥರನ್ನಾಗಿ ಮಸ್ಕ್ ಅವರನ್ನು ನೇಮಿಸಿದ್ದರು.
ನೇಮಿಸಿದ ನಂತರ ಹಲವಾರು ಸರ್ಕಾರಿ ಇಲಾಖೆಗಳನ್ನು ಮುಚ್ಚಿದ್ದರು. ಉದ್ಯೋಗಿಗಳನ್ನು ಮನೆಗೆ ಕಳುಹಿಸಿದರು. ಅಮೆರಿಕದ ಹಲವು ದೇಶಗಳಿಗೆ ನೀಡುತ್ತಿದ್ದ USAID ನಿಲ್ಲಿಸಿದ್ದರು. ಇದರಿಂದಾಗಿ ಸರ್ಕಾರಿ ಇಲಾಖೆಯ ಕೆಂಗಣ್ಣಿಗೆ ಮಸ್ಕ್ ಗುರಿಯಾಗಿದ್ದರು.