Friday, November 22
Share News

ಬೆಂಗಳೂರು: ಹಾಸನ ಸಂಸಂದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣ ಎನ್ಡಿಎ ನಾಯಕರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟ ಲೋಕಸಭೆ ಚುನಾವಣೆ ಎದುರಿಸಿದೆ. ಆದರೆ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣ ಮೈತ್ರಿಕೂಟದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ದೋಸ್ತಿ ಮುಂದುವರೆಯುವುದು ಅನುಮಾನ ಎನ್ನಲಾಗುತ್ತಿತ್ತು. ಆದರೆ, ಇದು ಹುಸಿಯಾಗಿದ್ದು ಮೈತ್ರಿ ಮುಂದುವರೆಸಲು ಉಭಯ ಪಕ್ಷಗಳು ಒಲವು ಹೊಂದಿವೆ. ಮುಂಬರುವ ವಿಧಾನ ಪರಿಷತ್ ಚುನಾವಣೆಯನ್ನೂ ಕೂಡ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಎದುರಿಸಲಿವೆ.

ಹೌದು ಲೋಕಸಭೆ ಚುನಾವಣೆ ಬಳಿಕ ಇದೀಗ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ವಿಧಾನ ಪರಿಷತ್ನ ಆರು ಸ್ಥಾನಗಳ ಪೈಕಿ ನಾಲ್ಕು ಸ್ಥಾ‌ನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದರೇ, ಎರಡು ಸ್ಥಾ‌ನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ವಿಧಾನಪರಿಷತ್ನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರವಿವಾರ (ಮೇ 11) ಪ್ರಕಟವಾಗುವ ಸಾಧ್ಯತೆ ಇದೆ.

ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಹಾಗೂ ಈಶಾನ್ಯ ಪದವೀಧರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಶಿಕ್ಷಕರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ ಇಳಿಯಬಹುದು. ಸೀಟು ಹಂಚಿಕೆ ವಿಚಾರವಾಗಿ ಶೀಘ್ರದಲ್ಲಿಯೇ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಒಮ್ಮತ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ರವಿವಾರ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈಗಾಗಲೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೇ 16 ಕೊನೆಯ ದಿನವಾಗಿದೆ. ಜೂನ್ 3 ರಂದು ಮತದಾನ ನಡೆಯಲಿದೆ.

ದೆಹಲಿಯತ್ತ ಕುಮಾರಸ್ವಾಮಿ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಮತ್ತು ವಿಧಾನ ಪರಿಷತ್ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿಯಾಗವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಹೋರಾಟ ಮಾಡಲು ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ. ಹಾಗೇ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾನಾಯಕನ ಕೆಲ ದಾಖಲೆಗಳನ್ನು ದೆಹಲಿಯಲ್ಲಿ ಬಿಡುಗಡೆ ಸಾಧ್ಯತೆ ಇದೆ. ದೆಹಲಿಗೆ ಬರುವ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಈಗಾಗಲೆ ಬಿಜೆಪಿ ವರಿಷ್ಠರ ಜೊತೆ ಚರ್ಚೆ ನಡೆಸಿದ್ದಾರೆ.


Share News

Comments are closed.

Exit mobile version