ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ ‘ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಭಿಯಾನದ ಮೂಲಕ ದೇಶದ ಪ್ರಸ್ತುತ ಪರಿಸ್ಥಿತಿ ಕುರಿತು ಜನರ ಅಭಿಪ್ರಾಯ ಹಾಗೂ ಅವರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ತಿಳಿದುಕೊಳ್ಳಲಾಗುವುದು ಎಂದು ಹೇಳಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸಿದ ಪ್ರತಿಭಟನೆಯ ಬಳಿಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ದೊಡ್ಡ ಗೆಲುವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಳೆದ ಕೆಲವು ವರ್ಷಗಳಲ್ಲಿ ಜನರಲ್ಲಿ ಮೂಡಿದ್ದ ಭೀತಿಯ ವಾತಾವರಣ ಕಡಿಮೆಯಾಗಿದ್ದು, ಜನರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಲು ಆರಂಭಿಸಿದ್ದಾರೆ ಎಂದ ಅವರು, ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ ಹಾಗೂ ಪಂಡಿತ್ ಜವಾಹರಲಾಲ್ ನೆಹರೂ ಅವರ ಆದರ್ಶಗಳಂತೆ ಭಾರತದ ಸಂವಿಧಾನವೇ ಪಕ್ಷದ ಮೂಲ ಸಿದ್ಧಾಂತವಾಗಿದೆ ಎಂದು ಹೇಳಿದರು.
ದೇಶದಲ್ಲಿ ನಿರುದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ವ್ಯಾಪಾರೀಕರಣ ಪ್ರಮುಖ ಸವಾಲುಗಳಾಗಿದ್ದು, ಶಿಕ್ಷಣ ಸುಧಾರಣೆಗೆ ಪಕ್ಷವು ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖ್ಯ ವಕ್ತಾರ ಸೌರವ್ ದಾಸ್, ವಕ್ತಾರ ಅಶುತೋಷ್ ರಾಂಕಾ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.























