ಕೊನೆಗೂ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದೆ. ಮೆಡಿಕಲ್ ಕಾಲೇಜು ಕುರಿತ ಹಲವು ವರ್ಷಗಳ ಪುತ್ತೂರಿನ ಜನತೆಯ ಕನಸು ಈ ಬಾರಿ ನನಸಾಗಲಿದೆ.
ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ತಿಳಿಸಿದ್ದಾರೆ.
ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ನಿಟ್ಟಿನಲ್ಲಿ ಕಳೆದ ಏಳೆಂಟು ವರ್ಷಗಳಿಂದ ನಡೆಯುತ್ತಿರುವ ಹೋರಾಟ ಈ ಮೂಲಕ ತಾರ್ಕಿಕ ಅಂತ್ಯ ಕಂಡಿದೆ.
2024ರ ಬಜೆಟ್‌ನಲ್ಲಿಯೇ ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಅದು ಬೇಡಿಕೆಯಾಗಿಯೇ ಉಳಿದಿತ್ತು. ಮೆಡಿಕಲ್ ಕಾಲೇಜು ಮಂಜೂರಾತಿಗಾಗಿ ಆರಂಭದಿಂದಲೇ ಸರಕಾರದ ಮೇಲೆ ಒತ್ತಡ ಹೇರಿದ್ದ ಶಾಸಕ ಅಶೋಕ್ ಕುಮಾರ್ ರೈ ಶ್ರಮ ಈಗ ಫಲ ಕೊಟ್ಟಿದೆ.
ದಕ್ಷಿಣ ಕನ್ನಡದಲ್ಲಿ ಈಗಾಗಲೇ 8 ಮೆಡಿಕಲ್ ಕಾಲೇಜುಗಳ ಪಟ್ಟಿಗೆ ಇನ್ನೊಂದು ಮೆಡಿಕಲ್ ಕಾಲೇಜು ಸೇರ್ಪಡೆಗೊಳ್ಳಲಿದೆ.