Friday, November 22
Share News

ನವದೆಹಲಿ: ಸಂಸದ ರಾಹುಲ್ ಗಾಂಧಿ ಅವರು ನಾಳೆ ರಾಜೀನಾಮೆ ನೀಡುವುದು ನಿರ್ಧಾರವಾಗಿದೆ.

ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅನಿವಾರ್ಯವಾಗಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಲೇ ಬೇಕಾಗಿದೆ. ಈ ಸ್ಥಾನಕ್ಕೆ ಪ್ರಿಯಾಂಗಾ ವಾದ್ರಾ ಚುನಾವಣಾ ಆಖಾಡಕ್ಕೆ ಇಳಿಯಲಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದೆ ರಾಯ್ ಬರೇಲಿ ಮತ್ತು ವಯನಾಡು ಈ 2 ಆಯ್ಕೆಗಳಿತ್ತು. ಇವೆರಡರಲ್ಲಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ರಾಹುಲ್ ಗಾಂಧಿ ಆಯ್ಕೆ ಮಾಡಿಕೊಂಡಿದ್ದಾರೆ. ಅವರಿಂದ ತೆರವಾಗುವ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪದಾರ್ಪಣೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಚಿತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರು ರಾಯ್ ಬರೇಲಿ ಮತ್ತು ವಯನಾಡ್ ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡೂ ಕಡೆ ಗೆದ್ದಿದ್ದರು. ಲೋಕಸಭಾ ಚುನಾವಣಾ ಫಲಿತಾಂಶದ 14 ದಿನಗಳಲ್ಲಿ ಒಂದು ಸ್ಥಾನವನ್ನು ಖಾಲಿ ಮಾಡಬೇಕಾಗಿದೆ. ಹೀಗಾಗಿ, ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದರು. ರಾಯ್‌ಬರೇಲಿ ಕ್ಷೇತ್ರವನ್ನು ರಾಹುಲ್ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿರುವುದರಿಂದ ಅದನ್ನು ಉಳಿಸಿಕೊಳ್ಳಬೇಕೆಂದು ಪಕ್ಷ ನಿರ್ಧರಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಈ ಸಭೆಯಲ್ಲಿ ಉಪಸ್ಥಿತರಿದ್ದರು.

“ರಾಹುಲ್ ಗಾಂಧಿಯಿಂದ ತೆರವಾಗುವ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧಿಸಬೇಕೆಂದು ನಾವು ನಿರ್ಧರಿಸಿದ್ದೇವೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ನಿರ್ಧಾರವನ್ನು ಒಪ್ಪಿಕೊಂಡ ಸಹೋದರ-ಸಹೋದರಿಗೆ (ರಾಹುಲ್- ಪ್ರಿಯಾಂಕಾ) ಅವರು ಧನ್ಯವಾದ ತಿಳಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ನರೇಂದ್ರ ಮೋದಿ ಅವರ ಎದುರಾಳಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು. ಬಳಿಕ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳೂ ಹರಿದಾಡಿದ್ದವು. ಆದರೆ, ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡಲು ಸಮಯ ಮೀಸಲಿಡುತ್ತೇನೆ ಎಂದಿದ್ದ ಪ್ರಿಯಾಂಕಾ ಗಾಂಧಿ ಯಾವ ಕ್ಷೇತ್ರದಲ್ಲೂ ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಇದೀಗ ವಯನಾಡು ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಅವರು ಪದಾರ್ಪಣೆ ಮಾಡಲಿದ್ದಾರೆ.

2004ರಿಂದ ಸೋನಿಯಾ ಗಾಂಧಿ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಗೆ ತೆರಳುವವರೆಗೂ ರಾಯ್ಬರೇಲಿ ಕ್ಷೇತ್ರದ ಸ್ಥಾನವನ್ನು ಹೊಂದಿದ್ದರು. ರಾಹುಲ್ ಗಾಂಧಿಯವರ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಅವರ ಪತಿ ಫಿರೋಜ್ ಗಾಂಧಿಯವರು ಸಹ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಈ ಹಿನ್ನೆಲೆಯಲ್ಲಿ ರಾಯ್ಬರೇಲಿ ಗಾಂಧಿ ಕುಟುಂಬದ ಭದ್ರಕೋಟೆಯಾಗಿದೆ.

ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಜೂನ್ 4ರಂದು ಪ್ರಕಟಿಸಲಾಗಿತ್ತು. ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ 293 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟ 234 ಸ್ಥಾನಗಳನ್ನು ಪಡೆದುಕೊಂಡಿದೆ. ನರೇಂದ್ರ ಮೋದಿ ಅವರು 71 ಸಚಿವರೊಂದಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.


Share News

Comments are closed.

Exit mobile version