ಬಿರುಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಮಳೆಯ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಬಿಸಿಲಿನಿಂದ ಬೆಂದ ಜನರಿಗೆ ಮುಂದಿನ ಮೂರ್ನಾಲ್ಕು ದಿನದ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತನ್ನ ವರದಿಯಲ್ಲಿ ತಿಳಿಸಿದೆ.
ಹವಾಮಾನ ಇಲಾಖೆಯು ಬಿಡುಗಡೆ ಮಾಡಿರುವ ವರದಿ ಪ್ರಕಾರ, ಯುಗಾದಿ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಹಾಸನ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಯುಗಾದಿ ವೇಳೆ ಅಶ್ವಿನಿ, ಭರಣಿ ಮಳೆಗಳು ಬರಬಹುದು ಎನ್ನುವ ನಿರೀಕ್ಷೆ ರೈತಾಪಿ ವಲಯದ್ದು. ಇದಕ್ಕೆ ಪೂರಕವಾಗಿ ಹವಾಮಾನ ಇಲಾಖೆಯೂ ಮಳೆಯ ಮಾಹಿತಿಯನ್ನು ನೀಡಿದೆ.
ಏಪ್ರಿಲ್ 6ರ ಶನಿವಾರದಂದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ, ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಹಳೆ ಮೈಸೂರು ಭಾಗದ ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ.
ಏಪ್ರಿಲ್ 7ರ ಭಾನುವಾರದಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆ ಬೀಳುವ ಮುನ್ಸೂಚನೆಯನ್ನು ನೀಡಲಾಗಿದೆ. ಏಪ್ರಿಲ್ 8ರ ಸೋಮವಾರದಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ಒಂದರೆಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆಯುನ್ನು ನೀಡಿದೆ.