ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವತಿಯಿಂದ ಆಯೋಜಿಸಲಾಗುವ ಮಂಗಳೂರು ದಸರಾ ಮಹೋತ್ಸವವು ಅ.11ರಿಂದ ಅ.22ರವರೆಗೆ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದ್ದಾರೆ.
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಮಂಗಳೂರು ದಸರಾ ಮಹೋತ್ಸವದ ಸಮಾಲೋಚನಾ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.
ಮಹೋತ್ಸವದಲ್ಲಿ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಧಾರ್ಮಿಕ ಮುಖಂಡರು ಪಾಲ್ಗೊಳ್ಳಲಿದ್ದಾರೆ. ದಸರಾ ಸಂದರ್ಭದಲ್ಲಿ ಪ್ರತಿದಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅನ್ನದಾನವೂ ನಡೆಯಲಿದೆ.
ಮಹೋತ್ಸವದ ಅಂಗವಾಗಿ ಅಕ್ಷರಾಭ್ಯಾಸ, ಮೆಹಂದಿ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಕಿನ್ನಿ ಪಿಲಿ ಕುಣಿತ, ಹೂಮಾಲೆ ಕಟ್ಟುವ ಸ್ಪರ್ಧೆ, ಬೆಂಕಿರಹಿತ ಅಡುಗೆ ಸ್ಪರ್ಧೆ, ಆಂಗಿಕಂ ಹಾಗೂ ಜನಪದ ಸಮೂಹ ಗಾಯನ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದು ಪದ್ಮರಾಜ್ ಆರ್. ತಿಳಿಸಿದರು.
ಮಂಗಳೂರು ದಸರಾ ಮಹೋತ್ಸವವನ್ನು ಯಶಸ್ವಿಗೊಳಿಸಲು ಭಕ್ತರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.






















