ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯವನ್ನು ಸಾರುವ ಉದ್ದೇಶದಿಂದ ಡಿ.8ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ‘ಪುತ್ತೂರು ದೀಪೋತ್ಸವ’ ನಡೆಯಲಿದೆ.
ದೀಪೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ ಹಾಗೂ ಸ್ವರ್ಣೋದ್ಯಮಿ ಜಿ.ಎಲ್. ಬಲರಾಮ ಆಚಾರ್ಯ, ಅಧ್ಯಕ್ಷರಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಅವರನ್ನು ಆಯ್ಕೆ ಮಾಡಲಾಗಿದೆ.
ಉಪಾಧ್ಯಕ್ಷರಾಗಿ ದೇರ್ಲ ಕರುಣಾಕರ ರೈ ಹಾಗೂ ಡಾ. ಹರಿಕೃಷ್ಣ ಪಾಣಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಡಾ. ರವೀಶ್ ಪಡುಮಲೆ, ಸಂಚಾಲಕರಾಗಿ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ, ಕೋಶಾಧಿಕಾರಿಯಾಗಿ ಎಸ್. ದಾಮೋದರ ಪಾಟಾಳಿ, ಜೊತೆ ಕಾರ್ಯದರ್ಶಿಯಾಗಿ ಜಯಪ್ರಕಾಶ್ ರೈ ಚೆಲ್ಯಡ್ಕ ಹಾಗೂ ಸಹಕೋಶಾಧಿಕಾರಿಯಾಗಿ ಶ್ರೀಧರ್ ತೆಂಕಿಲ ಆಯ್ಕೆಯಾಗಿದ್ದಾರೆ.
ದೀಪೋತ್ಸವದ ಯಶಸ್ಸಿಗಾಗಿ ವಿವಿಧ ಕ್ಷೇತ್ರಗಳ ಗಣ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ಇತ್ತೀಚೆಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನೂ ನೆರವೇರಿಸಲಾಗಿದೆ.
ದಿನವಿಡೀ ವೈವಿಧ್ಯಮಯ ಕಾರ್ಯಕ್ರಮ
ಪುತ್ತೂರು ದೀಪೋತ್ಸವದ ಅಂಗವಾಗಿ ಬೆಳಿಗ್ಗೆ 6 ಗಂಟೆಗೆ ಭಜನಾ ಕಾರ್ಯಕ್ರಮ ಆರಂಭವಾಗಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, 11 ಗಂಟೆಗೆ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ಆಯೋಜಿಸಲಾಗಿದೆ.
ಮಧ್ಯಾಹ್ನ 2 ಗಂಟೆಯಿಂದ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ತೆಂಕುತಿಟ್ಟು ಹಾಗೂ ಬಡಗುತಿಟ್ಟು ಯಕ್ಷಗಾನದ ಕಲಾ ವೈಭವವನ್ನು ಒಟ್ಟುಗೂಡಿಸುವ ‘ದ್ರೌಪದಿ ಪ್ರತಾಪ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಸತೀಶ್ ಶೆಟ್ಟಿ ಪಟ್ಲ ಹಾಗೂ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರ ಭಾಗವತಿಕೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿದೆ.
ಸಂಜೆ 6 ಗಂಟೆಗೆ ಧರ್ಮಸಭೆ ನಡೆಯಲಿದ್ದು, ರಾತ್ರಿ 8 ಗಂಟೆಯಿಂದ ಖ್ಯಾತ ಸಂಗೀತ ಕಲಾವಿದ ಡಾ. ವಿದ್ಯಾಭೂಷಣ್ ಹಾಗೂ ಅವರ ಪುತ್ರಿಯಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ತಿಳಿಸಿದ್ದಾರೆ.






















