ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಡಿ.8ರಂದು ಜರುಗಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳಿಗೆ ಅಧಿಕೃತ ಚಾಲನೆ ದೊರೆತಿದೆ. ಪುತ್ತೂರು ದೀಪೋತ್ಸವ ಸಮಿತಿಯ ನೇತೃತ್ವದಲ್ಲಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿರುವ ಕಾರ್ಯಕ್ರಮದ ಅಂಗವಾಗಿ ಬುಧವಾರ ಚಪ್ಪರ ಮುಹೂರ್ತ ಸಮಾರಂಭ ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉದ್ಯಮಿ ವಾಮನ ಪೈ ಅವರು ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಕೃಪಾಶೀರ್ವಾದದಿಂದ ದೀಪೋತ್ಸವವು ಯಾವುದೇ ಅಡೆತಡೆಯಿಲ್ಲದೆ ಅದ್ಧೂರಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಿತಿಯಿಂದ ಸದಾ ಸಂಪೂರ್ಣ ಬೆಂಬಲ ನೀಡಲಾಗುವುದು. ಮುಂದಿನ ದಿನಗಳಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಿಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಮಾತನಾಡಿ, ಈ ವರ್ಷದ ದೀಪೋತ್ಸವವನ್ನು ವಿಶೇಷ ಉತ್ಸವದ ರೂಪದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಐದು ಸಾವಿರಕ್ಕೂ ಅಧಿಕ ಭಕ್ತರು ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿ ಸಮಿತಿಗಳನ್ನು ರಚಿಸಲಾಗಿದೆ. ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.
ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಸ್ವಾಗತಿಸಿ ವಂದಿಸಿದರು. ದೀಪೋತ್ಸವ ಸಮಿತಿ ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರೂಪಿಸಿದರು.





















