ನವದೆಹಲಿ: ಫುಕೆಟ್‌ನಿಂದ ನವದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ 36 ಸಾವಿರ ಅಡಿ ಎತ್ತರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು.
ವಿಮಾನವು 36 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ಮೂರು ಹೈಡ್ರಾಲಿಕ್ ವ್ಯವಸ್ಥೆಗಳು ಕೆಲವೇ ಸೆಕೆಂಡುಗಳ ಅಂತರದಲ್ಲಿ ಸ್ಥಗಿತಗೊಂಡಿವೆ. ಇದರಿಂದ ಆಟೋಪೈಲಟ್ ಸಂಪರ್ಕ ಕಡಿತಗೊಂಡಿದ್ದು, ವಿಮಾನದಲ್ಲಿ ತೀವ್ರ ಏರುಪೇರು ಉಂಟಾಗಿದೆ.
ಘಟನೆಯ ಪರಿಣಾಮ ವಿಮಾನದಲ್ಲಿದ್ದ 24 ಪ್ರಯಾಣಿಕರಿಗೆ ಗಾಯಗಳಾಗಿವೆ. ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಬಳಿಕ ಪೈಲಟ್‌ಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿದ್ದು, ಹೈಡ್ರಾಲಿಕ್ ವ್ಯವಸ್ಥೆಗಳು ಹಂತ ಹಂತವಾಗಿ ಮತ್ತೆ ಕಾರ್ಯನಿರ್ವಹಿಸಲು ಆರಂಭಿಸಿವೆ.
ಬಳಿಕ ವಿಮಾನವನ್ನು ಯಾವುದೇ ಹೆಚ್ಚಿನ ಅಪಾಯವಿಲ್ಲದೆ ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಮಾನಯಾನ ಸಂಸ್ಥೆ ಹಾಗೂ ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.























