ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ.
ಮೊದಲು ಮೊಣಕಾಲು ಸಂಬಂಧ ಆಪರೇಷನ್ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಸಚಿವ ಡಿ. ಸುಧಾಕರ್ ಅವರು 1961 ಮಾರ್ಚ್28ರಂದು ಎನ್. ದಶರಥಯ್ಯ ಮತ್ತು ಕಾಂಚನಮಾಲಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಇವರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಡೆದರೆ, ಪದವಿ ಶಿಕ್ಷಣವನ್ನು ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿ.ಕಾಂ ಪೂರೈಸುವ ಮೂಲಕ ಮುಗಿಸಿದರು. ವೃತ್ತಿಜೀವನದಲ್ಲಿ ತಂದೆಯಿಂದ ಬಳುವಳಿಯಾಗಿ ಬಂದಿದ್ದ ಕೃಷಿ ಮತ್ತು ಲಿಕ್ಕರ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಇವರು, ನಂತರ ರಾಜಕೀಯದತ್ತ ಆಕರ್ಷಿತರಾದರು. ಮಾಜಿ ಶಾಸಕ ಎನ್. ಜಯಣ್ಣ ಅವರಿಂದ ರಾಜಕೀಯ ಕಲಿತ ಸುಧಾಕರ್, ಹಂತ ಹಂತವಾಗಿ ಬೆಳೆದು ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗುರುತಿಸಿಕೊಂಡಿದ್ದರು.
ಇವರು ಪತ್ನಿ ಹರ್ಷಿಣಿ, ಮಗ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಅವರನ್ನು ಅಗಲಿದ್ದಾರೆ. ಸಚಿವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.






















