ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಗ್ರಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಅ. 15ರಂದು ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ. ಕ. ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಬೆಳಗ್ಗೆ ಮುಖ್ಯ ರಸ್ತೆಯಿಂದ ಪೂರ್ಣಕುಂಬದ ಮೂಲಕ ಧರ್ಮಸ್ಥಳದ ಡಾ. ಡಿ. ವಿರೇಂದ್ರ ಹೆಗ್ಗಡೆ ಸ್ವಾಗತಿಸಲಾಗುವುದು. ಬಳಿಕ ಧರ್ಮಾಧಿಕಾರಿಗಳು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಆಶಯ ಭಾಷಣವನ್ನು ನೀಡಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ವೇದಿಕೆ ರಾಜ್ಯ ಸಂಘಟನಾಧ್ಯಕ್ಷ ನಟರಾಜ ಬಾದಾಮಿ, ಮನೋತಜ್ಞ ಡಾ. ಶ್ರೀನಿವಾಸ್ ಭಟ್, ನಗರ ಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ವೇದಿಕೆ ಸ್ಥಾಪಕಾಧ್ಯಕ್ಷ ವಸಂತ್ ಸಾಲಿಯಾನ್, ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಉದ್ಯಮಿ ಆರ್. ಬಿ. ಹೆಬ್ಬಳ್ಳಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ವೇದಿಕೆಯ ವತಿಯಿಂದ ಗಾಂಧಿ ಜಯಂತಿಯನ್ನು ಸಂಭ್ರಮದಿಂದ ವಿಶಿಷ್ಠ ಮತ್ತು ವಿಭಿನ್ನವಾಗಿ ಆಚರಿಸಲಾಗುತ್ತದೆ. ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆಗೆ ಪೂರಕವಾಗುವಂತೆ ಶಾಲಾ ಕಾಲೇಜುಗಳಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಇದಕ್ಕಾಗಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪ್ರತಿ ತಾಲೂಕಿಗೆ 1.25 ಲಕ್ಷ ಅನುದಾನ ನೀಡಲಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ 149 ಮದ್ಯವರ್ಜನ ಶಿಬಿರಗಳನ್ನು ನಡೆಸಿ 10,871 ಮಂದಿಯನ್ನು ವ್ಯಸನ ಮುಕ್ತರನ್ನಾಗಿ ಮಾಡಲಾಗಿದೆ. 52 ಶಾಲೆಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಕಾರ್ಯದರ್ಶಿ ಬಾಬು ನಾಯ್ಕ, ಜಿಲ್ಲಾ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ. ಸವಣೂರು, ಪುತ್ತೂರು ತಾಲೂಕು ಅಧ್ಯಕ್ಷ ಲೋಕೇಶ್ ಹೆಗ್ಡೆ ಉಪಸ್ಥಿತರಿದ್ದರು.