ಮಂಗಳೂರು, ಆ.7:
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಆದೇಶ ಹೊರಡಿಸಿದೆ.
ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿಯ ಮೇರೆಗೆ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12ನೇ ತರಗತಿವರೆಗೆ), ಐಟಿಐ (ITI) ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ (ಎಲ್ಲಾ ವಸತಿ ಶಾಲೆ-ಕಾಲೇಜುಗಳು ಸೇರಿದಂತೆ) ಆಗಸ್ಟ್ 8ರಂದು ರಜೆ ಘೋಷಿಸಲಾಗಿದೆ.
ಭಾರೀ ಮಳೆಯ ಮುನ್ಸೂಚನೆ ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.























