ಬೆಳ್ತಂಗಡಿ: ಬಾಲಕ ಸುಮಂತ್ ಅವರ ನಿಗೂಢ ಸಾವಿನ ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ, ತಾಯಿ, ಸಹೋದರ ಸೇರಿದಂತೆ ಐವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಗಿದೆ. ಇದೀಗ ಮುಂದಿನ ಹಂತವಾಗಿ ಬ್ರೆನ್ ಮ್ಯಾಪಿಂಗ್ ನಡೆಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ.
ಬೆಳ್ತಂಗಡಿ ತಾಲೂಕಿನ ನಾಳಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧನುಪೂಜೆಗೆ ತೆರಳಿದ್ದ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಅವರು ಸಂಶಯಾಸ್ಪದವಾಗಿ ಮೃತಪಟ್ಟಿದ್ದರು. ಪ್ರಕರಣದ ನಿಗೂಢತೆ ಬಯಲಿಗೆಳೆಯಲು ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸಿದರೂ ಇದುವರೆಗೆ ಸ್ಪಷ್ಟ ಫಲಿತಾಂಶ ದೊರಕದ ಹಿನ್ನೆಲೆಯಲ್ಲಿ ಮಂಪರು ಪರೀಕ್ಷೆಯ ಮೊರೆ ಹೋಗಲಾಗಿದೆ.
ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್, ತಾಯಿ ರತ್ನಾವತಿ, ಸಹೋದರ ಸುದರ್ಶನ್ ಹಾಗೂ ಸಂಬಂಧಿಕರಾದ ರಾಧಾಕೃಷ್ಣ ಮತ್ತು ಲಕ್ಷ್ಮೀನಾರಾಯಣ ಅವರನ್ನು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಮೊದಲ ಹಂತದ ಪ್ರಶ್ನೋತ್ತರ ಪ್ರಕ್ರಿಯೆಗೆ ಒಳಪಡಿಸಲಾಗಿದೆ. ಕೃಷಿಕರಾಗಿರುವ ಸುಬ್ರಹ್ಮಣ್ಯ ನಾಯಕ್ ಮತ್ತು ಗೃಹಿಣಿ ರತ್ನಾವತಿ ಅವರನ್ನು ಆ.10ರಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವಿಚಾರಣೆ ನಡೆಸಲಾಗಿದ್ದು, ನಿಟ್ಟೆ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸುದರ್ಶನ್ ಅವರನ್ನು ಮಧ್ಯಾಹ್ನದಿಂದ ಸಂಜೆವರೆಗೆ ಪ್ರಶ್ನಿಸಲಾಗಿದೆ.
ಮೊದಲ ಹಂತದಲ್ಲಿ ದಾಖಲಾದ ಪ್ರಶ್ನೆ ಮತ್ತು ಉತ್ತರಗಳನ್ನು ಮತ್ತೊಮ್ಮೆ ತಾಳೆ ಹಾಕುವ ಪ್ರಕ್ರಿಯೆ ನಡೆಯಲಿದ್ದು, ಬಳಿಕ ಬ್ರೆನ್ ಮ್ಯಾಪಿಂಗ್ ನಡೆಸಲಾಗುವುದು. ಪ್ರಕರಣದ ತನಿಖಾಧಿಕಾರಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರು ಅಗತ್ಯ ಪ್ರಶ್ನೆಗಳನ್ನು ಸಿದ್ಧಪಡಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ನೀಡಿದ್ದಾರೆ.
ಸುಮಂತ್ ಅವರನ್ನು ವ್ಯವಸ್ಥಿತವಾಗಿ ಹತ್ಯೆ ಮಾಡಲಾಗಿದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ನಿಗೂಢತೆ ಬಗೆಹರಿಯದ ಹಿನ್ನೆಲೆಯಲ್ಲಿ ತನಿಖೆಯ ಪ್ರಮುಖ ಹಂತವಾಗಿ ಶಂಕಿತರ ಮಂಪರು ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಕೋರ್ಟ್ ಅನುಮತಿಯನ್ನೂ ಪೊಲೀಸರು ಪಡೆದಿದ್ದಾರೆ.
ಪ್ರಕರಣದ ಸಮಗ್ರ ತನಿಖೆ ನಡೆಸಿ ನಿಗೂಢತೆಯನ್ನು ಬಯಲಿಗೆಳೆಯುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಸುಮಂತ್ ಸಾವಿನ ಹಿಂದಿರುವ ಸತ್ಯಾಂಶ ಹೊರಬರಲಿದೆಯೇ ಎಂಬುದು ಇದೀಗ ನಡೆಯಲಿರುವ ಮುಂದಿನ ತನಿಖಾ ಪ್ರಕ್ರಿಯೆಗಳ ಬಳಿಕ ಸ್ಪಷ್ಟವಾಗಬೇಕಿದೆ.

































