ಕಡಬ: ಕಂದಾಯ ಇಲಾಖೆಯ ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ಎಡಮಂಗಲ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ದೀಪಕ್ ಎಂದು ಗುರುತಿಸಲಾಗಿದೆ. ಎಡಮಂಗಲ ಗ್ರಾಮದ ಪುಳಿಕುಕ್ಕು ಎಂಬಲ್ಲಿರುವ ತಮ್ಮ ನಿವಾಸದಲ್ಲಿ ದೀಪಕ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ದೀಪಕ್ ಅವರು ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ದಿಢೀರ್ ಆಗಿ ಅವರು ಈ ರೀತಿಯ ಕಠಿಣ ನಿರ್ಧಾರ ಕೈಗೊಂಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಕೌಟುಂಬಿಕ ಸಮಸ್ಯೆ, ಆರ್ಥಿಕ ಸಂಕಷ್ಟ ಅಥವಾ ಕೆಲಸದ ಒತ್ತಡ ಸೇರಿದಂತೆ ಯಾವುದೇ ಕಾರಣವಿದೆಯೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.
























