ಮಂಗಳೂರು: ಬಂಟ್ವಾಳದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯವು ಭರತ್ ಕುಮ್ಡೇಲ್ ಸೇರಿದಂತೆ ಎಂಟು ಮಂದಿಗೆ ಜಾಮೀನು ಮಂಜೂರು ಮಾಡಿದ ಬಳಿಕ ಆರು ಮಂದಿಯ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನ್ಯಾಯಾಲಯ ಜಾಮೀನು ನೀಡಿದ ಕೆಲವೇ ಗಂಟೆಗಳಲ್ಲಿ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದು ಕಾನೂನಿನ ದುರ್ಬಳಕೆ ಹಾಗೂ ದಮನ ನೀತಿಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.
ನ್ಯಾಯಾಂಗ ವ್ಯವಸ್ಥೆ ಪರಿಶೀಲನೆ ನಡೆಸಿ ಜಾಮೀನು ಮಂಜೂರು ಮಾಡಿದ ಸಂದರ್ಭದಲ್ಲಿ ಸರ್ಕಾರವು ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು. ಆದರೆ ಜಾಮೀನು ದೊರೆತ ತಕ್ಷಣವೇ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಭರತ್ ಕುಮ್ಡೇಲ್, ಶಿವಪ್ರಸಾದ್, ಪ್ರದೀಪ್, ರಂಜಿತ್, ಅಭಿನ್ ಹಾಗೂ ತೇಜಕ್ಷ ಅವರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.
ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕುವ ಉದ್ದೇಶದಿಂದ ಕಾನೂನು ಕ್ರಮಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಇದೇ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಂಟ್ವಾಳದ ಬಿ.ಸಿ. ರೋಡ್‌ನಲ್ಲಿ ನಡೆಯಲಿರುವ ‘ಬಿ.ಸಿ. ರೋಡ್ ಚಲೋ’ ಬೃಹತ್ ಪ್ರತಿಭಟನೆಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ.
ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಹಾಗೂ ಕಾರ್ಯಕರ್ತರು ಭಾಗವಹಿಸುವಂತೆ ಅವರು ಕರೆ ನೀಡಿದ್ದಾರೆ.

























